ಬೆಂಗಳೂರು: “ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ತಮಗೆ ನೀಡಿದ್ದ ಆಫರ್ ಒಂದನ್ನು ನಿರಾಕರಿಸಿರುವ ಬಗ್ಗೆ ಬಹಿರಂಗಪಡಿಸಿದರು.
“ಕಾಂಗ್ರೆಸ್ ಹೈಕಮಾಂಡ್ ನಾಯಕರು ನನಗೆ ದೆಹಲಿಗೆ ಬಂದು ರಾಜ್ಯಸಭೆಗೆ ಹೋಗುವಂತೆ ಸೂಚಿಸಿದ್ದರು. ಆದರೆ ನಾನು ಅತ್ಯಂತ ವಿನಮ್ರವಾಗಿ ಅದಕ್ಕೆ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ. ನನಗೆ ರಾಷ್ಟ್ರೀಯ ರಾಜಕಾರಣಕ್ಕೆ ಹೋಗಲು ಆಸಕ್ತಿ ಇಲ್ಲ, ಕರ್ನಾಟಕದ ರಾಜಕೀಯದಲ್ಲೇ ಮುಂದುವರಿಯುವುದಾಗಿ ಹೈಕಮಾಂಡ್‌ಗೆ ತಿಳಿಸಿದ್ದೇನೆ” ಎಂದು ಸಿದ್ದರಾಮಯ್ಯ ಹೇಳಿದರು.
ಮುಂದುವರಿದು ಮಾತನಾಡಿದ ಅವರು, “ರಾಜ್ಯದ ಜನತೆ ನನ್ನನ್ನು ಐದು ವರ್ಷಗಳ ಕಾಲ ಶಾಸಕನನ್ನಾಗಿ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಶಾಸಕನ ಅವಧಿ ಇನ್ನೂ ಎರಡು ವರ್ಷ ಬಾಕಿ ಉಳಿದಿದೆ. ಅಲ್ಲಿಯವರೆಗೆ ಕರ್ನಾಟಕದ ಜನತೆ ಹಾಗೂ ನನ್ನ ಕ್ಷೇತ್ರದ ಜನರ ಪರವಾಗಿ ಶಾಸಕನಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ” ಎಂದು ತಿಳಿಸಿದರು.
ಇದೇ ವೇಳೆ “ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, “ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಹಾಗೂ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ” ಎಂದು ಉತ್ತರಿಸಿದರು. ಸುದ್ದಿಗೋಷ್ಠಿಯ ಕೊನೆಯಲ್ಲಿ ನಾಯಕರೆಲ್ಲರೂ ಪರಸ್ಪರ ಕೈ ಹಿಡಿದು ಮೇಲಕ್ಕೆ ಎತ್ತುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟನ್ನು ಪ್ರದರ್ಶಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


