ಸರಗೂರು: ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಮತ್ತು ವಸತಿ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷರಾದ ಅನಿಲ್ ಚಿಕ್ಕಮಾದು ಅವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮಾಜಿ ತಾಪಂ ಅಧ್ಯಕ್ಷ ಮನುಗನಹಳ್ಳಿ ಗುರುಸ್ವಾಮಿ ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಅನಿಲ್ ಚಿಕ್ಕಮಾದು ಅವರು ಕ್ಷೇತ್ರದಲ್ಲಿ ಸತತ ಎರಡು ಬಾರಿ ಗೆಲುವು ಸಾಧಿಸಿ, ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದಾರೆ. ಇಂತಹ ದಕ್ಷ ನಾಯಕರಿಗೆ ಸಚಿವ ಸ್ಥಾನ ನೀಡಿದರೆ, ಎಚ್.ಡಿ. ಕೋಟೆ ತಾಲ್ಲೂಕಿಗೆ ಅಂಟಿರುವ ‘ಹಿಂದುಳಿದ ತಾಲ್ಲೂಕು’ ಎಂಬ ಹಣೆಪಟ್ಟೆಯನ್ನು ತೊಲಗಿಸಲು ಸಹಾಯಕವಾಗುತ್ತದೆ. ಆದ್ದರಿಂದ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡಲು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಸಚಿವ ಸಂಪುಟ ಪುನರ್ ರಚನೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈ ಬೇಡಿಕೆ ಮುಂಚೂಣಿಗೆ ಬಂದಿದೆ. ರಾಜ್ಯದ ದಕ್ಷಿಣ ಭಾಗದಲ್ಲಿ ನಾಯಕ (ಎಸ್.ಟಿ) ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಸೂಕ್ತ ಅವಕಾಶ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಅನಿಲ್ ಚಿಕ್ಕಮಾದು ಅವರಿಗೆ ಅವಕಾಶ ಸಿಕ್ಕರೆ ಒಳ್ಳೆಯ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸ್ಥಾನದ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ನಮ್ಮ ಸಮುದಾಯದಲ್ಲಿ ಸತೀಶ್ ಜಾರಕಿಹೊಳಿ ಅವರು ಸಿಎಂ ಸ್ಥಾನಕ್ಕೆ ಅರ್ಹರಾಗಿರುವ ವ್ಯಕ್ತಿಯಾಗಿದ್ದಾರೆ. ಅವರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರಂತೆಯೇ ಸಾಮಾಜಿಕ ಬದ್ಧತೆಯನ್ನು ಹೊಂದಿದ್ದಾರೆ,” ಎಂದರು.
ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ಸಿಕ್ಕರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು, ಮತ್ತಷ್ಟು ಪ್ರಗತಿ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಹಕಾರಿಯಾಗುತ್ತದೆ ಎಂದು ಗುರುಸ್ವಾಮಿ ಆಶಯ ವ್ಯಕ್ತಪಡಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


