ಕೊರಟಗೆರೆ: ತಾಲ್ಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ ಸಹಿತ ಭಾರಿ ಮಳೆಗೆ ಸಾರ್ವಜನಿಕ ಆಸ್ತಿಪಾಸ್ತಿಗಳು ಜಲಾವೃತಗೊಂಡಿದ್ದು, ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ ಮಳೆಯಿಂದಾಗಿ ಭಾರಿ ಅವಾಂತರ ಸೃಷ್ಟಿಯಾಗಿದೆ.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾ.ಪಂ ವ್ಯಾಪ್ತಿಯ ಕಾಶಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ. ಈ ಶಾಲೆಯಲ್ಲಿ ಒಟ್ಟು 78ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ಚರಂಡಿಯಲ್ಲಿ ಹರಿಯಬೇಕಾದ ನೀರು ನೇರವಾಗಿ ಶಾಲಾ ಕೊಠಡಿಗಳತ್ತ ನುಗ್ಗುತ್ತಿದೆ.
ಈಗಾಗಲೇ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲೆಗೆ ನೀರು ನುಗ್ಗಿರುವುದರಿಂದ ಮಕ್ಕಳು ಎಲ್ಲಿ ಕುಳಿತು ಪಾಠ ಕೇಳಬೇಕು ಎಂದು ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಕೊರಟಗೆರೆ ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಪ್ರದೇಶವು ತಗ್ಗು ಪ್ರದೇಶದಲ್ಲಿದೆ. ಸಣ್ಣ ಮಳೆ ಬಂದರೂ ಸಾಕು, ಇಡೀ ಪಾರ್ಕಿಂಗ್ ಸ್ಥಳವು ಕೆರೆಯಂತೆ ಭಾಸವಾಗುತ್ತದೆ. ಬಸ್‌ಗಾಗಿ ಕಾಯುವ ಪ್ರಯಾಣಿಕರು ಅನಿವಾರ್ಯವಾಗಿ ಈ ಗಲೀಜು ನೀರಿನಲ್ಲೇ ನಡೆದುಕೊಂಡು ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆ ಕಣ್ಣೆದುರೇ ಕಾಣುತ್ತಿದ್ದರೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲದಂತೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ವಿಪರ್ಯಾಸಕ್ಕೆ ಕಾರಣವಾಗಿದೆ.
ಪಟ್ಟಣದ ಹೊರವಲಯದಲ್ಲಿರುವ ಬೈಪಾಸ್ ರಸ್ತೆಯೂ ಮಳೆ ನೀರಿಗೆ ಸಂಪೂರ್ಣ ಜಲಾವೃತಗೊಂಡಿದೆ. ಸುವರ್ಣಮುಖಿ ಪೆಟ್ರೋಲ್ ಬಂಕ್ ಮುಂಭಾಗದ ಕೊರಟಗೆರೆ-ಬೆಂಗಳೂರು ಮುಖ್ಯ ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ, ನೀರು ರಸ್ತೆಯ ಮೇಲೆಯೇ ಹರಿಯುತ್ತಿದೆ. ಇದೇ ರೀತಿ ರಸ್ತೆಯಲ್ಲಿ ನೀರು ನಿಂತರೆ ಕೆಲವೇ ದಿನಗಳಲ್ಲಿ ಡಾಂಬರು ಕಿತ್ತುಬಂದು ದೊಡ್ಡ ದೊಡ್ಡ ಗುಂಡಿಗಳು ಸೃಷ್ಟಿಯಾಗಲಿವೆ ಎಂದು ವಾಹನ ಸವಾರರು ಮತ್ತು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದು, ಕೂಡಲೇ ಚರಂಡಿ ದುರಸ್ತಿ ಮಾಡುವಂತೆ ಆಗ್ರಹಿಸಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


