ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಹಾಗೂ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
“ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…” ಎಂದು ಹೆಮ್ಮೆಯಿಂದ ಮಾತು ಆರಂಭಿಸಿದ ಅವರು, ತಮ್ಮ ಆರಾಧ್ಯ ದೈವ ‘ವೀರ ಗಂಗಾಧರ ಅಜ್ಜಯ್ಯ’ ಅವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವಿಶೇಷ ಸಂದರ್ಭದಲ್ಲಿ ಸಾಂಪ್ರದಾಯಿಕ ರೇಷ್ಮೆ ಪಂಚೆ, ಜುಬ್ಬ ಹಾಗೂ ಶಲ್ಯ ಧರಿಸಿದ್ದ ಡಿಕೆಶಿ ಅವರ ನಡೆ ಎಲ್ಲರ ಗಮನ ಸೆಳೆಯಿತು. ರಾಜಭವನಕ್ಕೆ ಬರುವ ಮುನ್ನ ಸದಾಶಿವನಗರದ ತಮ್ಮ ನಿವಾಸದಲ್ಲಿ ಐದಕ್ಕೂ ಹೆಚ್ಚು ಪುರೋಹಿತರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಹೊರಟಿದ್ದರು.
ಈ ಐತಿಹಾಸಿಕ ಕ್ಷಣಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಗ್ರ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಕ್ಷಿಯಾದರು.
ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಪ್ರಮುಖ ರಾಜ್ಯಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇತ್ತೀಚೆಗೆ ಬಿಜೆಪಿಯಿಂದ ಉಚ್ಛಾಟನೆಗೊಂಡಿದ್ದ ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಎಸ್‌ಟಿ ಸೋಮಶೇಖರ್ ಅವರು ಈ ಸಮಾರಂಭದಲ್ಲಿ ಭಾಗವಹಿಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿತು.
ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಮಠಾಧೀಶರು, ಮುಸ್ಲಿಂ ಧರ್ಮಗುರುಗಳು (ಮೌಲ್ವಿಗಳು) ಹಾಗೂ ಚರ್ಚ್‌ಗಳ ಮುಖ್ಯಸ್ಥರು ಉಪಸ್ಥಿತರಿದ್ದು ಆಶೀರ್ವದಿಸಿದರು. ಜೊತೆಗೆ ಚಿತ್ರರಂಗದ ತಾರೆಯರು ಹಾಗೂ ಡಿಕೆಶಿ ಕುಟುಂಬಸ್ಥರು ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಡಿಕೆಶಿ ಅವರ ಪದಗ್ರಹಣದೊಂದಿಗೆ ರಾಜ್ಯದಲ್ಲಿ ಹೊಸ ರಾಜಕೀಯ ಅಧ್ಯಾಯ ಆರಂಭವಾಗಿದ್ದು, ಜಿ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಶೀಘ್ರದಲ್ಲೇ ನೂತನ ಸಚಿವರ ಅಧಿಕೃತ ಪಟ್ಟಿಯೂ ಬಿಡುಗಡೆಯಾಗಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


