ನವದೆಹಲಿ: ಕರ್ನಾಟಕದಲ್ಲಿ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಪ್ರಕ್ರಿಯೆ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ವಿಧಾನ ಪರಿಷತ್ ಹಿರಿಯ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಬಿ.ಕೆ. ಹರಿಪ್ರಸಾದ್ ಅವರು ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ, ಸಚಿವರ ಮೊದಲ ಪಟ್ಟಿಯಲ್ಲಿ ಅವರ ಹೆಸರು ಇರಲಿಲ್ಲ. ಈ ಬೆಳವಣಿಗೆಯ ನಡುವೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಹರಿಪ್ರಸಾದ್ ಅವರೊಂದಿಗೆ ಚರ್ಚಿಸಿ, ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಮನವೊಲಿಸಿದರು. ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಅವರು ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಜಾತಿ ಸಮೀಕರಣವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಮಾಂಡ್ ಹಿಂದುಳಿದ ವರ್ಗಕ್ಕೆ ಸೇರಿದ, ಈಡಿಗ (ಬಿಲ್ಲವ) ಸಮುದಾಯದ ಬಿ.ಕೆ. ಹರಿಪ್ರಸಾದ್ ಅವರಿಗೆ ಪಕ್ಷದ ರಾಜ್ಯ ಘಟಕದ ಚುಕ್ಕಾಣಿ ನೀಡಿದೆ. ಈ ಮುನ್ನ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದರು. ಅವರು ಸಚಿವ ಸ್ಥಾನದ ಜತೆಗೆ ಅಧ್ಯಕ್ಷ ಪದವಿಗೂ ಪಟ್ಟು ಹಿಡಿದಿದ್ದರು. ಆದರೆ, “ಒಬ್ಬರಿಗೆ ಒಂದೇ ಹುದ್ದೆ” ಎಂಬ ನಿಯಮದ ಹಿನ್ನೆಲೆಯಲ್ಲಿ ಹೈಕಮಾಂಡ್ ಇದಕ್ಕೆ ಸಮ್ಮತಿಸಿರಲಿಲ್ಲ. ಆ ನಂತರ ಹರಿಪ್ರಸಾದ್ ಅವರ ಹೆಸರು ಮುನ್ನೆಲೆಗೆ ಬಂದಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


