ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ವದಂತಿಗಳನ್ನು ಹಿರಿಯ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. “ಪಕ್ಷದಲ್ಲಿ ನನಗೆ ಯಾವುದೇ ಅನ್ಯಾಯವಾಗಿಲ್ಲ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತನಾಗಿದ್ದೇನೆ” ಎಂದು ಅವರು ತಿಳಿಸಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆಯ ಆಕಾಂಕ್ಷಿಗಳಲ್ಲಿ ತಾವು ಕೂಡ ಒಬ್ಬರಾಗಿದ್ದನ್ನು ಒಪ್ಪಿಕೊಂಡರು. “ಹೌದು, ನನಗೂ ಮುಖ್ಯಮಂತ್ರಿಯಾಗುವ ಆಸೆ ಇತ್ತು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ, ಪಕ್ಷದ ಶಿಸ್ತಿನ ಸೈನಿಕರಾಗಿ ನಾವು ಅದನ್ನು ಸ್ವೀಕರಿಸಬೇಕು. ನನ್ನ ಅನುಭವವನ್ನು ಕಡೆಗಣಿಸಲಾಗಿದೆ ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
ತಮ್ಮ ಮೇಲೆ ವಿಶ್ವಾಸವಿಟ್ಟು ಉಪಮುಖ್ಯಮಂತ್ರಿ ಜವಾಬ್ದಾರಿ ನೀಡಿದ ಕಾಂಗ್ರೆಸ್ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದ ಅವರು, “ಸದ್ಯದ ಪರಿಸ್ಥಿತಿಯಲ್ಲಿ ನನ್ನನ್ನು ಉಪಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಇದನ್ನು ಜನರಿಗೆ ಸೇವೆ ಸಲ್ಲಿಸಲು ಮತ್ತು ಕಾಂಗ್ರೆಸ್ ಸಿದ್ಧಾಂತ ಹಾಗೂ ಪ್ರಣಾಳಿಕೆಗೆ ಅನುಗುಣವಾಗಿ ಕೆಲಸ ಮಾಡಲು ಸಿಕ್ಕ ಮತ್ತೊಂದು ಅವಕಾಶವೆಂದು ಪರಿಗಣಿಸುತ್ತೇನೆ. ಜನರಿಗೆ ಮತ್ತು ರಾಜ್ಯಕ್ಕೆ ಸೇವೆ ಸಲ್ಲಿಸಲು ಅವಕಾಶ ಸಿಕ್ಕರೆ ಯಾವುದೇ ಹುದ್ದೆಯಾದರೂ ಒಳ್ಳೆಯದೇ” ಎಂದು ಹೇಳಿದರು.
ಇದೇ ವೇಳೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪರಮೇಶ್ವರ ಅವರು ಅಭಿನಂದನೆ ಸಲ್ಲಿಸಿದರು. ತಮಗೆ ವಹಿಸಲಿರುವ ಖಾತೆಯ ಕುರಿತು ಪ್ರತಿಕ್ರಿಯಿಸಿ, “ನನಗೆ ಯಾವ ಖಾತೆ ನೀಡಲಾಗುವುದು ಎಂದು ಇನ್ನೂ ತಿಳಿದಿಲ್ಲ. ಹೈಕಮಾಂಡ್ ಯಾವುದೇ ಖಾತೆ ವಹಿಸಿದರೂ ನಾನು ನಿಷ್ಠೆಯಿಂದ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


