ಬೆಂಗಳೂರು: ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ದೊಡ್ಡ ಬಂಡಾಯದ ಬಿಸಿ ತಟ್ಟಿದೆ. ತಮಗೆ ಹಂಚಿಕೆ ಮಾಡಲಾದ ಖಾತೆ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಹಿರಿಯ ನಾಯಕ ಹಾಗೂ 9 ಬಾರಿಯ ಶಾಸಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮಾಧ್ಯಮಗಳ ಮುಂಭಾಗದಲ್ಲಿ ರಾಜೀನಾಮೆ ಪತ್ರ ಸಿದ್ಧಪಡಿಸಿದ ರಾಮಲಿಂಗಾರೆಡ್ಡಿ, ತಮಗೆ ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ತೀವ್ರ ಬೇಸರ ಹೊರಹಾಕಿದ್ದಾರೆ. “ನನಗೆ ಜಲಸಂಪನ್ಮೂಲ ಖಾತೆಗೆ ಹೋಗಲು ಮನಸ್ಸು ಒಪ್ಪುತ್ತಿಲ್ಲ. ಬೇರೆ ಎಲ್ಲದಕ್ಕೂ ಬೆಂಗಳೂರಿಗೆ ನಾನು ಬೇಕು, ಆದರೆ ಖಾತೆ ಕೊಡುವಾಗ ಮಾತ್ರ ಹೀಗೇಕೆ?” ಎಂದು ಪ್ರಶ್ನಿಸಿದ್ದಾರೆ.
2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಲಾಗಿತ್ತು, ಆದರೆ ಸಾರಿಗೆ ಖಾತೆ ನೀಡಲಾಯಿತು. ಆ ಸಂದರ್ಭದಲ್ಲಿ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ಅವರು ತಮ್ಮ ಮನೆಗೆ ಬಂದು ಮಾತು ಕೊಟ್ಟಿದ್ದರು. ಆದರೆ ಈಗ ಕೊಟ್ಟ ಮಾತು ತಪ್ಪಿ ಜಲಸಂಪನ್ಮೂಲ ಖಾತೆ ನೀಡಿದ್ದಾರೆ ಎಂದು ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ನಿರ್ಧಾರ ಪ್ರಕಟಿಸುವ ವೇಳೆ ಯೂತ್ ಕಾಂಗ್ರೆಸ್ ನಾಯಕ ಮನೋಹರ್ ಅವರು ಸಮಾಧಾನಪಡಿಸಲು ಯತ್ನಿಸಿದಾಗ, “ನನ್ನ ನಿರ್ಧಾರ ಮುಗಿದ ಕಥೆ, ನನಗೆ ಕೋಪ ಬರಿಸಬೇಡಿ” ಎಂದು ರೆಡ್ಡಿ ಗದರಿದ್ದಾರೆ. “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಅವರು ಖಡಕ್ ಆಗಿ ಹೇಳಿದ್ದಾರೆ.
ರಾಜೀನಾಮೆ ಘೋಷಣೆ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, “ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ನನ್ನ ಆಪ್ತ ಸ್ನೇಹಿತರು. ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ, ಬೆಂಗಳೂರಿನಲ್ಲೇ ಕೆಲಸ ಮಾಡುವ ಆಪೇಕ್ಷೆ ಇದೆ ಎಂದು ಹೇಳಿದ್ದಾರೆ. ಅವರ ಅಸಮಾಧಾನವನ್ನು ನಾವು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ಆರಂಭದಲ್ಲೇ ಆಪ್ತ ವಲಯದ ಹಿರಿಯ ನಾಯಕರೊಬ್ಬರು ಹೀಗೆ ಬಹಿರಂಗವಾಗಿ ಬಂಡಾಯವೆದ್ದಿರುವುದು ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


