ತುಮಕೂರು: ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಉರ್ದು ಶಾಲೆಗಳ ಶೈಕ್ಷಣಿಕ ಪರಿಸ್ಥಿತಿಯನ್ನು ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆಲವು ಉರ್ದು ಶಾಲೆಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ವೇಳೆ ವಿದ್ಯಾರ್ಥಿಗಳ ಗೈರು ಹಾಜರಾತಿ, ಮೂಲಭೂತ ಸೌಲಭ್ಯಗಳ ಕೊರತೆ ಹಾಗೂ ಬಾಡಿಗೆ ಕಟ್ಟಡಗಳಲ್ಲಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಅಲ್ಪಸಂಖ್ಯಾತ ಸಮುದಾಯದವರು ವಿವಿಧ ಯೋಜನೆಗಳಡಿ ಬ್ಯಾಂಕ್ ಗಳಿಗೆ ಸಲ್ಲಿಸಿರುವ ಸಾಲದ ಅರ್ಜಿಗಳನ್ನು ತ್ವರಿತವಾಗಿ ಪರಿಶೀಲಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಾಕಿ ಉಳಿದಿರುವ ಅರ್ಜಿಗಳ ಸಂಪೂರ್ಣ ಮಾಹಿತಿಯನ್ನು ಸಲ್ಲಿಸುವಂತೆ ತಿಳಿಸಿದರು. ಇದೇ ವೇಳೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ತುಮಕೂರು ನಗರದಲ್ಲಿ ಪ್ರಾರಂಭಿಸಲಾಗಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಶೇ.100ರಷ್ಟು ದಾಖಲಾತಿ ಖಚಿತ ಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ಸಭೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಜನಾಂಗದವರಿಗೆ ಸ್ಮಶಾನಗಳಿಗಾಗಿ ನಿವೇಶನಗಳ ಅಗತ್ಯವಿರುವ ಬಗ್ಗೆ ನಾಮನಿರ್ದೇಶಿತ ಸದಸ್ಯರು ಮನವಿ ಮನವಿ ಸಲ್ಲಿಸಿದ ಮೇರೆಗೆ ಅಗತ್ಯ ಪ್ರಸ್ತಾವನೆಗಳನ್ನು ತಕ್ಷಣ ಪಡೆದು ಮಂಜೂರಾತಿಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಜೊತೆಗೆ ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ವ್ಯಾಪಕ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳ ಅಂಗನವಾಡಿ ಕೇಂದ್ರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೇ.100ರಷ್ಟು ಹಾಜರಾತಿ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಕೋರಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಬ್ಯಾಂಕ್ ಪ್ರತಿನಿಧಿಗಳು ಹಾಗೂ ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


