ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2 ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರೈತರಿಂದ ವಿವಿಧ ಕಂದಾಯ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಿದರು.
ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಕಂದಾಯ ಇಲಾಖೆಯ ಸೇವೆಗಳ ಕುರಿತು ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಸಿದ್ದಾಪುರ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಕಂದಾಯ ಸೌಲಭ್ಯಗಳ ಕುರಿತು ಚರ್ಚಿಸಿದ ಸಂದರ್ಭದಲ್ಲಿ, ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಆರ್ ಆರ್ ಟಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ದೂರುಗೆ ತಕ್ಷಣ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಬಾಕಿ ಇರುವ ಅರ್ಜಿಗಳನ್ನು ನಿಯಮಾನುಸಾರ ಆದ್ಯತೆಯ ಮೇರೆಗೆ ಶೀಘ್ರವಾಗಿ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಧುಗಿರಿ ಪಟ್ಟಣದ ಸರ್ಕಾರಿ ಪಿ ಎಂ ಶ್ರೀ ಪ್ರಾಥಮಿಕ ಪಾಠಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಪಠ್ಯ ಪುಸ್ತಕಗಳ ಲಭ್ಯತೆ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿರುವ ಬಗ್ಗೆ ಮಾಹಿತಿ ಪಡೆದು ಶಾಲಾ ಮುಖ್ಯ ಉಪಾಧ್ಯಾಯರೊಂದಿಗೆ ಚರ್ಚಿಸಲಾಯಿತು.
ನಂತರ ಶಾಲೆಯ ಬೆಳಗಿನ ಉಪಾಹಾರ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಹಾಲಿನ ಗುಣಮಟ್ಟ ಮತ್ತು ಪೌಷ್ಟಿಕತೆಯ ಬಗ್ಗೆ ಪರಿಶೀಲನೆ ನಡೆಸಿದರು. ಶಾಲೆಯ ಶೈಕ್ಷಣಿಕ ಚಟುವಟಿಕೆಗಳು ಹಾಗೂ ಪೌಷ್ಟಿಕ ಆಹಾರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಧುಗಿರಿ ಉಪ ವಿಭಾಗಾಧಿಕಾರಿಗಳಾದ ಗೂಟುರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್ ಕೆ, ಕಂದಾಯ ಇಲಾಖೆಯ ಬಸವರಾಜು, ಗುರು ಶಂಕರ್, ತುಂಬಾಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ನಟರಾಜು, ಗೋವಿಂದರಾಜು, ಕಾರ್ಯದರ್ಶಿ ಸಂಪತ್, ಗ್ರಂಥಪಾಲಕ ದಯಾನಂದ ಸ್ವಾಮಿ, ತಿಮ್ಮಜ್ಜ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


