ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಒ) ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಡಾ. ಗಿರೀಶ ಬದೋಲೆ ಅವರು ಅದೇಶ ಹೊರಡಿಸಿದ್ದಾರೆ.
ಹುಮ್ನಾಬಾದ್ ತಾಲೂಕಿನ ಸಿತಾಳಗೇರಾ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ಬೀರಪ್ಪಾ ಹಾಗೂ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮ ಪಂಚಾಯಿತಿ ಪಿಡಿಒ ಅಬ್ದುಲ್ ರಜಾಕ್ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ.
ಸಿತಾಳಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಂಬೂರ ಗ್ರಾಮದಲ್ಲಿ ಕಳೆದ ಫೆಬ್ರವರಿ ತಿಂಗಳಲ್ಲಿ ಕುಡಿಯುವ ನೀರಿನ ಮೂಲಗಳ ನಿರ್ವಹಣೆ ಹಾಗೂ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ಪಿಡಿಒ ರಮೇಶ್ ಬೀರಪ್ಪಾ ನಿರ್ಲಕ್ಷ್ಯ ತೋರಿದ್ದರು. ಇದರೊಂದಿಗೆ, ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಬಾಕಿ ಗೌರವಧನ ಪಾವತಿಸಲು ಪಂಚಾಯಿತಿ ಖಾತೆಯಲ್ಲಿ ಹಣ ಇಲ್ಲದಿದ್ದರೂ ಚೆಕ್ ನೀಡಿ ಕರ್ತವ್ಯ ಲೋಪ ಎಸಗಿದ್ದರು. ಈ ಕುರಿತು ಕಾರಣ ಕೇಳಿ ನೋಟಿಸ್ ಜಾರಿ ಮಾಡಿದರೂ ಯಾವುದೇ ಸಮಜಾಯಿಸಿ ಉತ್ತರ ನೀಡದ ಹಿನ್ನೆಲೆಯಲ್ಲಿ, ಆರೋಪಗಳು ಸಾಬೀತಾದ ಕಾರಣ ಅವರನ್ನು ಅಮಾನತುಗೊಳಿಸಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ಬಿಡುಗಡೆಯಾದ ಅನುದಾನದ ವೆಚ್ಚಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸುವಲ್ಲಿ ಮುಡಬಿ ಪಿಡಿಒ ಅಬ್ದುಲ್ ರಜಾಕ್ ವಿಫಲರಾಗಿದ್ದರು. ಪಂಚಾಯಿತಿಯಲ್ಲಿ ಸುಮಾರು ₹34.04 ಲಕ್ಷ ಮೊತ್ತದ ಎಫ್ಟಿಒ (FTO)ಗಳನ್ನು ಸೃಷ್ಟಿಸಲಾಗಿದ್ದರೂ, ಅವುಗಳ ಪಾವತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಖಜಾನೆಗೆ ಸಲ್ಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಬಸವಕಲ್ಯಾಣ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಲವು ಬಾರಿ ಸೂಚನೆ ನೀಡಿದ್ದರೂ ಇವರು ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ದೈನಂದಿನ ಕಾರ್ಯಗಳಿಗೆ ಗೈರುಹಾಜರಾಗುವುದು, ಸಾರ್ವಜನಿಕರಿಂದ ದೂರುಗಳು ಕೇಳಿಬಂದಿರುವುದು ಮತ್ತು ಮೇಲಾಧಿಕಾರಿಗಳ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇವರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ನಾಗರಿಕ ಸೇವೆ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರ ನಿಯಮ-10(1)(ಡಿ) ಅಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಇಬ್ಬರನ್ನೂ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಮಾನತು ಅವಧಿಯಲ್ಲಿ ಇಬ್ಬರು ಅಧಿಕಾರಿಗಳು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ತೊರೆಯುವಂತಿಲ್ಲ ಹಾಗೂ ಕೆಸಿಎಸ್ಆರ್ ನಿಯಮಾನುಸಾರ ಜೀವನಾಧಾರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


