ಕೊರಟಗೆರೆ: ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ಕಿರಾಂಪುರ ಸಂತೆ ಮೈದಾನದ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆ ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಅಪೂರ್ವ ಸಿ. ಅನಂತರಾಮು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸಂತೆ ಮೈದಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಬಳಿಕ ಅಕ್ಕಿರಾಂಪುರ ಗ್ರಾಮದ ಕರ್ನಾಟಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾರ್ಥಿ ನಿಲಯದ ಕಟ್ಟಡ ದುರಸ್ಥಿ ಕಾರ್ಯಕ್ಕೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆ ನಡೆಸಿ, ಕಟ್ಟಡದ ಸ್ಥಿತಿಗತಿಗಳನ್ನು ಅವಲೋಕಿಸಿದರು. ವಿದ್ಯಾರ್ಥಿನಿಯರ ಸುರಕ್ಷತೆ ಮತ್ತು ಅನುಕೂಲತೆ ದೃಷ್ಟಿಯಿಂದ ಅಗತ್ಯ ದುರಸ್ಥಿ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ದಯಾನಂದ್, ನರೇಗಾ ತಾಂತ್ರಿಕ ಸಂಯೋಜಕ ಗುರುಮೂರ್ತಿ, ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರಮೇಶ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಅನಂತರ ಅಕ್ಕಿರಾಂಪುರ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಕಾರ್ಯ ನಿರ್ವಾಹಕ ಅಧಿಕಾರಿಗಳು, ತೆರಿಗೆ ಸಂಗ್ರಹ ಪ್ರಗತಿ, ಕುಡಿಯುವ ನೀರಿನ ಮಾದರಿ ಪರೀಕ್ಷಾ ವರದಿ, ನರೇಗಾ ಕಾಮಗಾರಿಗಳ ಕಡತಗಳು ಸೇರಿದಂತೆ ವಿವಿಧ ಕಚೇರಿ ದಾಖಲೆಗಳನ್ನು ಪರಿಶೀಲಿಸಿದರು. ಆಡಳಿತಾತ್ಮಕ ಕಾರ್ಯಗಳನ್ನು ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


