ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು ಅಪಾಯಕಾರಿ ಜಾಗಗಳಲ್ಲಿ ಸಾಹಸ ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ತುಮಕೂರಿನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ.
ತುಮಕೂರು ತಾಲೂಕಿನ ಬಳ್ಳಾಪುರ ಮೂಲದ ಶಿವಪ್ರಸಾದ್ ಗಾಯಗೊಂಡ ದುರ್ದೈವಿ. ಇವರು ಪ್ರಸ್ತುತ ಅರಸೀಕೆರೆಯ ಪಿಯು ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಜೂನ್ 28ರ ಭಾನುವಾರ ರಜೆ ಇದ್ದ ಕಾರಣ ಶಿವಪ್ರಸಾದ್ ಅವರು ದೇವರಾಯನದುರ್ಗ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ದೇವರಾಯನದುರ್ಗದ ದೇವಸ್ಥಾನದ ಹಿಂಭಾಗದಲ್ಲಿರುವ ಅಪಾಯಕಾರಿ ಬಂಡೆಯನ್ನು ಹತ್ತಿ ಮೊಬೈಲ್ ನಲ್ಲಿ ರೀಲ್ಸ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ದುರದೃಷ್ಟವಶಾತ್ ರೀಲ್ಸ್ ಮಾಡುವ ಗಡಿಬಿಡಿಯಲ್ಲಿ ಕಾಲು ಜಾರಿ ಬೆಟ್ಟದ ಮೇಲಿಂದ ಕೆಳಗೆ ಬಿದ್ದಿದ್ದಾರೆ.
ಶಿವಪ್ರಸಾದ್ ಬೆಟ್ಟದಿಂದ ಕೆಳಗೆ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಪ್ರವಾಸಿಗರು ಮತ್ತು ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅವರನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರೂ, ಅವರ ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ.
ಪ್ರಸ್ತುತ ಗಾಯಾಳು ಉಪನ್ಯಾಸಕರನ್ನು ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರವಾಸಿ ತಾಣಗಳಲ್ಲಿ ಇಂತಹ ಅಪಾಯಕಾರಿ ಸಾಹಸಗಳಿಗೆ ಕೈ ಹಾಕದಂತೆ ಸಾರ್ವಜನಿಕರು ಮತ್ತು ಪ್ರವಾಸಿಗರಲ್ಲಿ ಪೊಲೀಸರು ಹಾಗೂ ಸ್ಥಳೀಯ ಆಡಳಿತ ಮನವಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




