ಬಳ್ಳಾರಿ: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಹಮ್ಮಿಕೊಳ್ಳಲಾಗಿರುವ ‘ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ’ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಮತ್ತು ಪೋಷಕರಲ್ಲಿ ಜಾಗೃತಿ ಮೂಡಿಸಲು ನಗರದ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಗುರುವಾರ ಬೃಹತ್ ಜಾಗೃತಿ ಜಾಥಾವನ್ನು ಆಯೋಜಿಸಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರು, “ಮತದಾರರ ಪಟ್ಟಿಯು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಪ್ರತಿಯೊಬ್ಬ ನಾಗರಿಕರು ತಮ್ಮ ಮಾಹಿತಿಯನ್ನು ಸರಿಯಾಗಿ ಪರಿಶೀಲಿಸಿ ಎಸ್‌ಐಆರ್ ಗಣತಿ ನಮೂನೆಗಳನ್ನು ಭರ್ತಿ ಮಾಡಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಬೇಕು. ಇದರಿಂದ ಪಾರದರ್ಶಕ ಹಾಗೂ ವಿಶ್ವಾಸಾರ್ಹ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಾಧ್ಯವಾಗುತ್ತದೆ. ಈ ಕುರಿತು ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಹಾಗೂ ಪೋಷಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು” ಎಂದು ಕರೆ ನೀಡಿದರು.
18 ವರ್ಷ ತುಂಬಿದ ಯುವಕ-ಯುವತಿಯರು ಫಾರ್ಮ್–6 ರ ಮೂಲಕ ಹೆಸರು ನೋಂದಾಯಿಸಿಕೊಳ್ಳಬಹುದು. ಇದೇ ವೇಳೆ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿರುವ ತಪ್ಪುಗಳ ತಿದ್ದುಪಡಿಗಾಗಿ ಫಾರ್ಮ್-8 ಅನ್ನು ಬಳಸಬಹುದು ಹಾಗೂ ಮರಣ ಹೊಂದಿದವರ ಅಥವಾ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸಹಕರಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, “ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ವೋಟರ್ ಹೆಲ್ಪ್ ಲೈನ್ ಆಪ್ (Voter Helpline App) ಅಥವಾ ವೋಟರ್ ಸರ್ವೀಸ್ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲೇ ಸುಲಭವಾಗಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಿಕೊಳ್ಳಬಹುದು” ಎಂದು ಮಾಹಿತಿ ನೀಡಿದರು. ಜುಲೈ 29ರ ವರೆಗೆ ಬಿಎಲ್‌ಓಗಳು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದು, ಆಗಸ್ಟ್ 5ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.
ಗಮನ ಸೆಳೆದ ಘೋಷಣಾ ಫಲಕಗಳು:
ಜಾಥಾದಲ್ಲಿ ಪಾಲ್ಗೊಂಡಿದ್ದ ನೂರಾರು ವಿದ್ಯಾರ್ಥಿಗಳು ‘ವಿಶೇಷ ಸಮಗ್ರ ಪರಿಷ್ಕರಣೆ-2026 ಪ್ರತಿಯೊಬ್ಬ ಅರ್ಹ ನಾಗರಿಕ, ಒಂದು ಮತ, ಒಂದು ಗುರುತು’, ‘ದೋಷರಹಿತ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ’ ಎಂಬ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆದರು. ಈ ಜಾಥಾವು ಸರ್ಕಾರಿ ಪಿಯು ಕಾಲೇಜಿನಿಂದ ಆರಂಭವಾಗಿ ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಸಾಗಿ ಮರಳಿ ಕಾಲೇಜು ಆವರಣದಲ್ಲಿ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂಶ್ ಶಿವಪುರೆ, ಜಿಪಂ ಸಹಾಯಕ ನಿರ್ದೇಶಕ ಬಸವರಾಜ ಹಿರೇಮಠ, ಕಾಲೇಜಿನ ಪ್ರಾಚಾರ್ಯ ಸುಂಕಪ್ಪ, ಪ್ರಾಧ್ಯಾಪಕರು ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


