ಔರಾದ್: ತಾಲೂಕಿನ ಕೌಠಾ (ಬಿ) ಗ್ರಾಮ ಪಂಚಾಯತ್ ವ್ಯಾಪ್ತಿಯ ಬಲ್ಲೂರ (ಜೆ), ಪಾಶಾಪೂರ ಹಾಗೂ ಕೌಠಾ (ಬಿ) ವಲಯಗಳಲ್ಲಿ ಕೇಂದ್ರ ಸರ್ಕಾರದ ‘ರಿವಾರ್ಡ್’ (REWARD) ಯೋಜನೆಯಡಿ ಕೈಗೊಳ್ಳಲಾದ ವಿವಿಧ ಕಾಮಗಾರಿಗಳಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಭೀಮ ಆರ್ಮಿ ಭಾರತ ಏಕತಾ ಮಿಷನ್ ತಾಲೂಕು ಘಟಕ ಆರೋಪಿಸಿದೆ. ಈ ಕುರಿತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ.
2025–2026ನೇ ಸಾಲಿನಲ್ಲಿ ರೈತರ ಹಿತದೃಷ್ಟಿಯಿಂದ ರಬ್ಬರ್ ಬಂಡ, ನಾಲಾ ಟರ್ನಿಂಗ್, ಚೆಕ್ ಡ್ಯಾಂ, ಖರ್ಸಿ ಹೊಂಡಾ ಹಾಗೂ ವಾಟರ್ ಪೈಪ್ ಸೇರಿದಂತೆ ಹಲವು ಮುಖ್ಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಉದ್ದೇಶ ಹೊಂದಲಾಗಿತ್ತು. ಆದರೆ, ಈ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸದೆ, ಕೇವಲ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಮನವಿಯಲ್ಲಿ ದೂರಲಾಗಿದೆ.
ಸಂತಪೂರ ಹೋಬಳಿ ವ್ಯಾಪ್ತಿಯ ಕೃಷಿ ಅಧಿಕಾರಿಗಳಾದ ಅಂಬರೀಷ (AO) ಹಾಗೂ ವೈಜಿನಾಥ ರೆಡ್ಡಿ ಅವರು ರೈತರ ಹೆಸರಿನಲ್ಲಿ ಕೇಂದ್ರ ಸರ್ಕಾರದ ರಿವಾರ್ಡ್ ಯೋಜನೆಯ ಸುಮಾರು ₹45 ರಿಂದ ₹50 ಲಕ್ಷದವರೆಗೆ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಭೀಮ ಆರ್ಮಿ ತಾಲೂಕು ಅಧ್ಯಕ್ಷ ಗೌತಮ ಪಿ. ಮೇತ್ರೆ ನೇರವಾಗಿ ಆರೋಪಿಸಿದ್ದಾರೆ.
“ಕೇಂದ್ರ ಸರ್ಕಾರದ ರಿವಾರ್ಡ್ ಯೋಜನೆಯಡಿ ರೈತರ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ದುರ್ಬಳಕೆ ನಡೆದಿರುವ ಶಂಕೆ ಇದೆ. ಸಂಬಂಧಪಟ್ಟ ಕಾಮಗಾರಿಗಳನ್ನು ಸ್ಥಳ ಪರಿಶೀಲನೆ ಮಾಡಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂತಪೂರ ಕೃಷಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು.”
— ಗೌತಮ ಪಿ. ಮೇತ್ರೆ, ತಾಲೂಕು ಅಧ್ಯಕ್ಷರು, ಭೀಮ ಆರ್ಮಿ ಭಾರತ ಏಕತಾ ಮಿಷನ್, ಔರಾದ್.
ಈ ಹಗರಣದ ಕುರಿತು ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಿ, ಕಾಮಗಾರಿಗಳು ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ತಕ್ಷಣವೇ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಒಂದು ವೇಳೆ ಸಂಬಂಧಪಟ್ಟ ಇಲಾಖೆಯ ಮೇಲಧಿಕಾರಿಗಳು ಕ್ರಮ ಕೈಗೊಳ್ಳಲು ವಿಳಂಬ ಮಾಡಿದರೆ, ಸಂತಪೂರ ಕೃಷಿ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್ ಜಿಲ್ಲೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


