ಸರಗೂರು: ತಾಲೂಕಿನಲ್ಲಿ ಆರಂಭಗೊಂಡಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಹಿನ್ನೆಲೆಯಲ್ಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಶನಿವಾರ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ತಾಲೂಕಿನ ಪುರದಕಟ್ಟೆ ಹಾಡಿ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್ಒ) ಮಾಹಿತಿ ಪಡೆದುಕೊಂಡರು. ಇದೇ ವೇಳೆ ಸಾರ್ವಜನಿಕರ ಮನೆ ಮನೆಗೆ ತೆರಳಿ ಮತದಾರರಲ್ಲಿ ಜಾಗೃತಿ ಮೂಡಿಸಿದ ಅವರು, ಯಾರೊಬ್ಬರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತದಾರರಿಗೆ ಪ್ರಮುಖ ಸೂಚನೆಗಳು:
ಬಿಎಲ್ ಒಗಳು ಮನೆಗೆ ಭೇಟಿ ನೀಡಿದಾಗ ಭರ್ತಿ ಮಾಡಿದ ಗಣತಿ ನಮೂನೆಯನ್ನು (ಎನ್ಯುಮರೇಷನ್ ಫಾರ್ಮ್) ನೀಡುತ್ತಾರೆ.
ಸಾರ್ವಜನಿಕರು ಆ ಫಾರಂ ಅನ್ನು ಸರಿಯಾಗಿ ಪರಿಶೀಲಿಸಿ, ವಿವರಗಳು ಸರಿಯಾಗಿದ್ದರೆ ಸಹಿ ಹಾಕಿ ಬಿಎಲ್ ಒಗಳಿಗೆ ವಾಪಸ್ ನೀಡಬೇಕು.
ಹಿಂದಿನ ಎಸ್ ಐಆರ್ ನ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ತಮ್ಮ ವಿವರಗಳನ್ನು ಅಧಿಕಾರಿಗಳಿಗೆ ಒದಗಿಸಬೇಕು.
“ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅತ್ಯಂತ ಮಹತ್ವದ ಕಾರ್ಯವಾಗಿದೆ. ಮತದಾನದ ಹಕ್ಕಿನಿಂದ ಯಾರೂ ವಂಚಿತರಾಗಬಾರದು. ಈ ಸಂಬಂಧ ಯಾವುದೇ ಗೊಂದಲಗಳಿದ್ದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು, ಮತದಾರರ ನೋಂದಣಾಧಿಕಾರಿ ಅಥವಾ ಸಹಾಯಕ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಬಗೆಹರಿಸಿಕೊಳ್ಳಬಹುದು.”
– ಆರ್.ಐಶ್ವರ್ಯ, ಹೆಚ್ಚುವರಿ ಜಿಲ್ಲಾಧಿಕಾರಿ
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ:
ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಬಿಎಲ್ಒಗಳಿಗೆ ಸೂಚಿಸಿದ ಹೆಚ್ಚುವರಿ ಜಿಲ್ಲಾಧಿಕಾರಿಗಳು, ಮತದಾರರಿಂದ ಗಣತಿ ನಮೂನೆಯನ್ನು ಸ್ವೀಕರಿಸಿದ ಬಳಿಕ ಅದನ್ನು ಕಡ್ಡಾಯವಾಗಿ ಡಿಜಿಟಲೀಕರಣ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಎಚ್.ಡಿ. ಕೋಟೆ ತಹಸೀಲ್ದಾರ್ ಶ್ರೀನಿವಾಸ, ಸರಗೂರು ಹೋಬಳಿ ರಾಜಸ್ವ ನಿರೀಕ್ಷಕ ರವಿಚಂದ್ರನ್, ಶಿರಸ್ತೇದಾರ್ ಪವನ್ ಸೇರಿದಂತೆ ಇತರೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


