ಕೊರಟಗೆರೆ: ತಾಲ್ಲೂಕಿನ ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿದೆ. ಸೈಟ್ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕುರಿಹಳ್ಳಿ ಹಾಗೂ ಬೋರಪ್ಪನಹಟ್ಟಿ ಗ್ರಾಮಗಳ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ ಘಟನೆ ನಡೆದಿದೆ.
ತೋವಿನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 65 ಮನೆ ಸೈಟ್ ಗಳ ಹಂಚಿಕೆಗೆ ಅವಕಾಶವಿದ್ದು, 90ಕ್ಕೂ ಹೆಚ್ಚು ಅರ್ಜಿಗಳು ಬಂದಿರುವುದು ಗೊಂದಲಕ್ಕೆ ಕಾರಣವಾಗಿದೆ.
ಈ ನಡುವೆ ಈಗಾಗಲೇ ಮನೆ ಸೈಟ್ ಹೊಂದಿರುವ ಕೆಲವರಿಗೂ ಮತ್ತೊಮ್ಮೆ ಸೈಟ್ ಮಂಜೂರು ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರದ ತುಮಕೂರು ಜಿಲ್ಲೆಯ ಎಲ್ಲಾಪುರ ನಿವಾಸಿಗಳಿಗೂ ಸೈಟ್ ನೀಡಲು ತೀರ್ಮಾನಿಸಲಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ಕುರಿಹಳ್ಳಿ ಮತ್ತು ಬೋರಪ್ಪನಹಟ್ಟಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಬ್–ಇನ್ಸ್ಪೆಕ್ಟರ್ ತೀರ್ಥೇಶ್ ಹಾಗೂ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಗ್ರಾಮಸ್ಥರು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸುನಿಲ್ ಸ್ಪಷ್ಟನೆ ನೀಡಿ, “ಸೈಟ್ ಹಂಚಿಕೆ ಕುರಿತು ಉಂಟಾಗಿರುವ ಗೊಂದಲವನ್ನು ಈಗಾಗಲೇ ಸರಿಪಡಿಸಿದ್ದೇವೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾವುದೇ ಅರ್ಹ ಫಲಾನುಭವಿ ಸೈಟ್‌ನಿಂದ ವಂಚಿತರಾಗುವುದಿಲ್ಲ. ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲೂ ಸೈಟ್ ಇಲ್ಲದವರಿಗೆ ಹಂತ ಹಂತವಾಗಿ ಸೈಟ್ ನೀಡಲಾಗುತ್ತದೆ. ಇದಕ್ಕಾಗಿ ಸುಮಾರು 20 ಎಕರೆಗೂ ಅಧಿಕ ಜಾಗವನ್ನು ಗುರುತಿಸಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


