ಸರಗೂರು: ತಾಲ್ಲೂಕಿನ ಕಾಡುಬೆಗೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದ್ದು, ಗ್ರಾಮದಲ್ಲಿ ಸದ್ಯ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಬಿ. ಮಟಕರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಬೆಗೂರು ಗ್ರಾಮದ ನಿವಾಸಿ ಸುಮಾ ಎಂಬುವವರೇ ಹಲ್ಲೆಗೊಳಗಾದ ದಲಿತ ಮಹಿಳೆ. ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ, ಅದೇ ಗ್ರಾಮದ ನಾಮಧಾರಿ ಸಮಾಜದ ದಾಸಪ್ಪ ಎಂಬುವರ ಮಕ್ಕಳಾದ ವಕೀಲ ಜಯಶಂಕರ್, ಸ್ವಾಮಿ ಹಾಗೂ ಇತರ ಕೆಲವು ವ್ಯಕ್ತಿಗಳು ಅಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಜಮೀನಿನ ವಿಷಯವಾಗಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಳಿಕ ಅವರ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯ ಪರಿಣಾಮವಾಗಿ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ತಕ್ಷಣವೇ ಚಿಕಿತ್ಸೆಗಾಗಿ ಎಚ್.ಡಿ. ಕೋಟೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಲಿತ ಮಹಿಳೆಯ ಮೇಲಿನ ಈ ದೌರ್ಜನ್ಯವನ್ನು ಖಂಡಿಸಿ ಕಾಡುಬೆಗೂರು ಗ್ರಾಮಸ್ಥರು ಹಾಗೂ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸದ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಅಧಿಕೃತ ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ಕಾನೂನು ರೀತ್ಯಾ ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


