ತುಮಕೂರು: ನಗರದ ಬೆಳಗುಂಬ ಬಳಿ ಭಾನುವಾರ ರಾತ್ರಿ ನಡುರಸ್ತೆಯಲ್ಲೇ ರೌಡಿಶೀಟರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಬೆಳಗುಂಬ ನಿವಾಸಿಯಾಗಿದ್ದ ಮಲ್ಲ ಅಲಿಯಾಸ್ ವೀರಣ್ಣ (42) ಕೊಲೆಯಾದ ದುರದೃಷ್ಟಕರ. ಈತ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ.
ರಾತ್ರಿ ಸುಮಾರು 8:30ರ ವೇಳೆಗೆ ಬೆಳಗುಂಬ ಸಮೀಪದ ಗರುಡ ಕೆಫೆ ಮುಂಭಾಗ ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ಮಲ್ಲನ ಮೇಲೆ ಏಕಾಏಕಿ ಅಟ್ಯಾಕ್ ಮಾಡಿದೆ. ಆತನ ಮನೆ ಸಮೀಪವೇ ವಿಕೃತವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಗುರುತೇ ಸಿಗದಂತೆ ಭೀಕರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕೊಲೆಯಾದ ಮಲ್ಲ 2008ರಲ್ಲಿ ವಡ್ಡರಹಳ್ಳಿ ಕ್ರಾಸ್ ಬಳಿ ನಡೆದಿದ್ದ ಗಡ್ಡ ರಾಜು ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಯಾಗಿದ್ದು, ಆ ಬಳಿಕ ಆತನ ವಿರುದ್ಧ ರೌಡಿಪಟ್ಟಿ ತೆರೆಯಲಾಗಿತ್ತು. ಹಳೆಯ ವೈಷಮ್ಯದ ಹಿನ್ನೆಲೆಯಲ್ಲೇ ಈ ಹತ್ಯೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುಮಕೂರು ಎಸ್‌ಪಿ ಅಶೋಕ್ ಹಾಗೂ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
