ತುಮಕೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಮಿಕ್ಕಳಿದ ವೃಂದದ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿ ಸಂಬಂಧ ತುಮಕೂರು ನಗರದ 27 ಪರೀಕ್ಷಾ ಕೇಂದ್ರಗಳಲ್ಲಿ ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಆಗಸ್ಟ್ 2ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆಯನ್ವಯ ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತ-ಮುತ್ತ ಇರುವ ಜೆರಾಕ್ಸ್ ಮತ್ತು ಕಂಪ್ಯೂಟರ್ / ಸೈಬರ್ ಅಂಗಡಿಗಳನ್ನು ಮುಚ್ಚತಕ್ಕದ್ದು.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ ಆಪ್ ಹಾಗೂ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.
ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಬೇಸಿಕ್ ಮೊಬೈಲ್ ಇರಿಸಿಕೊಳ್ಳಲು ಅವಕಾಶವಿದ್ದು, ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ / ವಿದ್ಯಾರ್ಥಿಗಳು ಮೊಬೈಲ್ ತರುವುದು / ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡು ಬಂದಲ್ಲಿ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರಡಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
