ವಿಜಯಪುರ: ರಸ್ತೆಗೆ ಅಡ್ಡಲಾಗಿ ನಿಂತಿದ್ದ ಆಟೋರಿಕ್ಷಾವನ್ನು ಪಕ್ಕಕ್ಕೆ ಸರಿಸುವಂತೆ ಹೇಳಿದ್ದಕ್ಕೆ, ಕರ್ತವ್ಯ ನಿರತ KSRTC ಬಸ್ ನಿರ್ವಾಹಕ (ಕಂಡಕ್ಟರ್) ಮೇಲೆ ಇಬ್ಬರು ದುಷ್ಕರ್ಮಿಗಳು ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಲಹಳ್ಳಿ ಸಮೀಪ ಮದರಿ–ಕನ್ನೊಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಅನ್ನು ಆರೋಪಿಗಳು ಅಡ್ಡಗಟ್ಟಿದ್ದಾರೆ. ಬಳಿಕ ಬಸ್ ನಿರ್ವಾಹಕ ಮಲ್ಲಪ್ಪ ಲಮಾಣಿ ಅವರೊಂದಿಗೆ ಜಗಳ ತೆಗೆದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಮಾತಿನ ಚಕಮಕಿ ತೀವ್ರಗೊಂಡು, ಆರೋಪಿಗಳು ಏಕಾಏಕಿ ಕಂಡಕ್ಟರ್ ಮಲ್ಲಪ್ಪ ಅವರ ಮೇಲೆ ಮುಗಿಬಿದ್ದು ಮನಬಂದಂತೆ ಥಳಿಸಿದ್ದಾರೆ. ಕಂಡಕ್ಟರ್ ಪ್ರತಿರೋಧ ಒಡ್ಡಿದಾಗ, ಆರೋಪಿಗಳು ಅವರ ಕುತ್ತಿಗೆಯನ್ನು ಬಲವಾಗಿ ಹಿಸುಕಿದ್ದಾರೆ. ಪರಿಣಾಮ ಮಲ್ಲಪ್ಪ ಅವರು ಬಸ್ ನಲ್ಲೇ ಅರೆಪ್ರಜ್ಞಾವಸ್ಥೆಗೆ ಜಾರಿ ಕುಸಿದುಬಿದ್ದಿದ್ದಾರೆ.
ಕಂಡಕ್ಟರ್ ಮೇಲೆ ದಾಳಿ ನಡೆಯುತ್ತಿದ್ದಂತೆ ಬಸ್ ನಲ್ಲಿದ್ದ ಪ್ರಯಾಣಿಕರು ತಕ್ಷಣ ಮಧ್ಯಪ್ರವೇಶಿಸಿ ಹಲ್ಲೆಯನ್ನು ತಡೆದಿದ್ದಾರೆ. ಅಲ್ಲದೆ, ಗಾಯಾಳು ನಿರ್ವಾಹಕರಿಗೆ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಳೆಯ ವೈಮನಸ್ಸು ಕಾರಣ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ರಮೇಶ್ ಹಾಗೂ ಆತನ ಸಹಚರ ಈ ಕೃತ್ಯ ಎಸಗಿದ್ದಾರೆ. ಹಿಂದಿನ ದಿನ ಆಟೋ ರಿಕ್ಷಾ ತೆರವುಗೊಳಿಸುವ ವಿಚಾರದಲ್ಲಿ ಉಂಟಾಗಿದ್ದ ವೈಮನಸ್ಸಿನ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿಡಿಯೋ ವೈರಲ್ :
ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರು ಈ ಇಡೀ ಹಲ್ಲೆಯ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಭಾರಿ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸಾರಿಗೆ ಸಿಬ್ಬಂದಿ ಮೇಲಿನ ಈ ದಾಳಿಯನ್ನು ಕೆಎಸ್ಆರ್ಟಿಸಿ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಮತ್ತು ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
