ಬೀದರ್: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಭಾನುವಾರ ಜಿಲ್ಲಾದ್ಯಂತ ನಡೆದ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದೆ ಅತ್ಯಂತ ಸುಸೂತ್ರವಾಗಿ ಹಾಗೂ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
ಲಿಖಿತ ಪರೀಕ್ಷೆಯನ್ನು ಎರಡು ವಿಭಿನ್ನ ಹಂತಗಳಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಗೆ ಕಲ್ಯಾಣ ಕರ್ನಾಟಕದ ಹೊರತಾದ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆದರೆ, ಸಂಜೆ 4 ಗಂಟೆಗೆ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳು ಪರೀಕ್ಷೆ ಬರೆದರು. ಜಿಲ್ಲೆಯ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ 10,627 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಈ ಪೈಕಿ 9,994 ಅಭ್ಯರ್ಥಿಗಳು ಹಾಜರಾಗಿದ್ದು, 663 ಅಭ್ಯರ್ಥಿಗಳು ಗೈರುಹಾಜರಾಗಿದ್ದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಲಾದ ಮುನ್ನೆಚ್ಚರಿಕೆ ಕ್ರಮಗಳು, ಅಕ್ರಮ ತಡೆ ವ್ಯವಸ್ಥೆ ಹಾಗೂ ಅಭ್ಯರ್ಥಿಗಳಿಗೆ ಕಲ್ಪಿಸಲಾದ ಮೂಲಭೂತ ಸೌಕರ್ಯಗಳ ಕುರಿತು ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಹಾಗೂ ಮೊಬೈಲ್ ಜಾಮರ್‌ಗಳನ್ನು ಅಳವಡಿಸಲಾಗಿತ್ತು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಸ್ಪಷ್ಟ ಮಾಹಿತಿ ಹಾಗೂ ಸೂಚನಾ ಫಲಕಗಳನ್ನು ಅಳವಡಿಸಲಾಗಿತ್ತು. ಜೊತೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರ ನೇತೃತ್ವದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಹಾಗೂ ಪ್ರಮುಖ ರಸ್ತೆ ಮಾರ್ಗಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ವರದಿ: ಅರವಿಂದ ಮಲ್ಲೀಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
