ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ತೋವಿನಕೆರೆ ಸಮೀಪದ ಕುರಂಕೋಟೆ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.
ಮೃತರನ್ನು ಕುರಂಕೋಟೆ ಗ್ರಾಮದ ಮಂಜುನಾಥ್ ಅವರ ಪತ್ನಿ ಚೈತ್ರಾ (20) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಅತ್ತಿಗೆ ಶೈಲಮ್ಮ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುರಂಕೋಟೆ ಕ್ರಾಸ್‌ನಲ್ಲಿರುವ ಶಾರದ ವಿದ್ಯಾ ಮಂದಿರ ಶಾಲೆಗೆ ಅತ್ತಿಗೆಯ ಮಗುವನ್ನು ಕರೆತರಲು ಚೈತ್ರಾ ಮತ್ತು ಶೈಲಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಕೂಲಿಂಗ್ ಶೀಟ್ ಸಾಗಿಸುತ್ತಿದ್ದ ಲಾಂಗ್ ಚಾರ್ಸಿ ಲಾರಿಯೊಂದು ರಸ್ತೆಯಲ್ಲಿದ್ದ ದೊಡ್ಡ ಗುಂಡಿಯನ್ನು ತಪ್ಪಿಸಲು ಏಕಾಏಕಿ ವಾಹನವನ್ನು ತಿರುಗಿಸಿದೆ. ಇದರಿಂದ ನಿಯಂತ್ರಣ ತಪ್ಪಿದ ಲಾರಿ ನೇರವಾಗಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಚೈತ್ರಾ ಸ್ಥಳದಲ್ಲೇ ಅಂತಿಮ ಉಸಿರೆಳೆದಿದ್ದಾರೆ.
ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿ ಹೊಸ ಬದುಕಿನ ಕನಸು ಕಾಣುತ್ತಿದ್ದ ಯುವತಿ ರಸ್ತೆ ಅವ್ಯವಸ್ಥೆಗೆ ಬಲಿಯಾಗಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರನ್ನು ತೀವ್ರ ಶೋಕಸಾಗರದಲ್ಲಿ ಮುಳುಗಿಸಿದೆ. ಘಟನೆಯ ಬಳಿಕ ಸ್ಥಳಕ್ಕೆ ನೂರಾರು ಸಾರ್ವಜನಿಕರು ಆಗಮಿಸಿ, ರಸ್ತೆಯಲ್ಲಿನ ಅಪಾಯಕಾರಿ ಗುಂಡಿಗಳೇ ಈ ದುರಂತಕ್ಕೆ ನೇರ ಕಾರಣವೆಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಲವು ಬಾರಿ ರಸ್ತೆ ದುರಸ್ತಿ ಮಾಡುವಂತೆ ಮನವಿ ಸಲ್ಲಿಸಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದೇ ಅಮಾಯಕ ಜೀವ ಬಲಿಯಾಗಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೊರಟಗೆರೆ ಸಿಪಿಐ ಪುರುಷೋತ್ತಮ್ ಹಾಗೂ ಪಿಎಸ್ ಐ ತೀರ್ಥೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಲಾರಿ ಚಾಲಕನ ವಿರುದ್ಧ ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
