ಬೀದರ್ (ಔರಾದ್): ಗ್ರಾಮೀಣ ಭಾಗದ ಜನರಿಗೆ ಸ್ವಗ್ರಾಮಗಳಲ್ಲೇ ಉದ್ಯೋಗ ಕಲ್ಪಿಸುವುದರ ಜೊತೆಗೆ ಜಲ ಹಾಗೂ ಮಣ್ಣಿನ ಸಂರಕ್ಷಣೆಗೆ ಪೂರಕವಾದ ಶಾಶ್ವತ ಆಸ್ತಿಗಳನ್ನು ನಿರ್ಮಿಸಲು ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ಗಿರೀಶ್ ದಿಲೀಪ್ ಬದೋಲೆ ಸೂಚಿಸಿದರು.
ತಾಲೂಕಿನ ಧೂಪತಮಹಾಗಾಂವ ಗ್ರಾಮದಲ್ಲಿ ವಿಕಸಿತ ಭಾರತ–ಜಿ ರಾಮ್ ಜಿ (VB-G RAM G) ಯೋಜನೆಯಡಿ ನಡೆಯುತ್ತಿರುವ ಕಾಂಟೂರ್ ಟ್ರೆಂಚ್ (CCT) ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಮಾತನಾಡಿದರು.
ವಲಸೆ ತಡೆಯಲು ಗ್ರಾಮಗಳಲ್ಲೇ ಉದ್ಯೋಗ ಸೃಷ್ಟಿ
“ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ ಹೋಗುವ ಅಗತ್ಯವಿಲ್ಲ. ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಪ್ರತಿಯೊಬ್ಬರಿಗೂ ಅವರ ಊರುಗಳಲ್ಲೇ ಸಾಕಷ್ಟು ಕೆಲಸದ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಫಲಾನುಭವಿಯೂ ಇದರ ಸದುಪಯೋಗ ಪಡೆದುಕೊಳ್ಳಬೇಕು” ಎಂದು ಸಿಇಒ ಕರೆ ನೀಡಿದರು.
ಯೋಜನೆಯ ಹೊಸ ಮಾರ್ಗಸೂಚಿ ಮತ್ತು ಸೌಲಭ್ಯಗಳ ಕುರಿತು ಮಾಹಿತಿ ನೀಡಿದ ಸಿಇಒ, ದಿನಗೂಲಿ ಮೊತ್ತವನ್ನು ₹370 ರಿಂದ ₹382 ಕ್ಕೆ ಹೆಚ್ಚಿಸಲಾಗಿದೆ. ವಾರ್ಷಿಕ ಉದ್ಯೋಗಾವಕಾಶವನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಗ್ರಾಮೀಣ್ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಕುಟುಂಬವೊಂದು ವರ್ಷಕ್ಕೆ ಗರಿಷ್ಠ ₹47,750 ರವರೆಗೆ ಆದಾಯ ಗಳಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಗ್ರಾಮೀಣ ಕುಟುಂಬಗಳಿಗೆ ನಿರಂತರ ಉದ್ಯೋಗ ಒದಗಿಸುವ ಮೂಲಕ ಹೆಚ್ಚು ಮಾನವ ದಿನಗಳ ಸೃಜನೆಗೆ ಶ್ರಮಿಸಬೇಕು ಮತ್ತು ಯೋಜನೆಯ ಸೌಲಭ್ಯಗಳು ತಳಮಟ್ಟದ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾಮಗಾರಿ ಸ್ಥಳದಲ್ಲಿದ್ದ ಕೂಲಿಕಾರ್ಮಿಕರೊಂದಿಗೆ ನೇರವಾಗಿ ಸಂವಾದ ನಡೆಸಿದ ಡಾ. ಗಿರೀಶ್ ಬದೋಲೆ, ಅವರ ಕುಂದುಕೊರತೆಗಳನ್ನು ಆಲಿಸಿದರು. ಇದೇ ವೇಳೆ ಕಾರ್ಮಿಕರ ಆರೋಗ್ಯ ವಿಚಾರಿಸಿ, ಅವರಿಗೆ ಬಾಳೆಹಣ್ಣುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ (ಆಡಳಿತ) ಜಯಪ್ರಕಾಶ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ, ಎಡಿಪಿಸಿ ದೀಪಕ ಕಡಿಮನಿ, ಗ್ರಾಮ ಪಂಚಾಯತ್ ಪಿಡಿಒ ನಂದಕಿಶೋರ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕ ಶರಣಪ್ಪ, ಐಇಸಿ ಅಂಬಾದಾಸ ಪಾಟೀಲ್, ಗ್ರಾ.ಪಂ ಸಿಬ್ಬಂದಿ ಹಾಗೂ ಕೂಲಿಕಾರ್ಮಿಕರು ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
