ಸರಗೂರು: ಪರಿಶಿಷ್ಟ ಜಾತಿಗಳಲ್ಲಿ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯಗಳಿಗೆ ನ್ಯಾಯಯುತ ಅವಕಾಶ ಕಲ್ಪಿಸಲು ಒಳಮೀಸಲಾತಿ ಅತ್ಯಗತ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹಾಗೂ ಮಾದರ ಮಹಾಸಭೆಯ ರಾಜ್ಯಾಧ್ಯಕ್ಷ ಕೆ.ಎಚ್. ಮುನಿಯಪ್ಪ ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಜಯಚಾಮರಾಜೇಂದ್ರ ಕ್ರೀಡಾಂಗಣದ ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ಮಾದರ ಮಹಾಸಭೆಯ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ’ದಲ್ಲಿ ಗಣ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಒಳಮೀಸಲಾತಿ ವಿಚಾರದಲ್ಲಿ ಎಲ್ಲ ಸಮುದಾಯಗಳ ಹಿತಾಸಕ್ತಿಯನ್ನು ಪರಿಗಣಿಸಿ, ಕಾನೂನುಬದ್ಧವಾಗಿ ಹಾಗೂ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರೊಂದಿಗೆ ಸಮಾಲೋಚಿಸಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವು ಸಾಮಾಜಿಕ ನ್ಯಾಯದ ಬದ್ಧತೆ ಹಾಗೂ ದಲಿತ-ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದೆ. 2026ರ ಏಪ್ರಿಲ್‌ನಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸಿದ್ದರಾಮಯ್ಯ ಅವರು ಒಳಮೀಸಲಾತಿ ಸೇರಿದಂತೆ ಒಟ್ಟು 15% ಮೀಸಲಾತಿ ಕುರಿತು ಘೋಷಿಸಿದ್ದು, ಜನಸಂಖ್ಯೆ ಮತ್ತು ಸಾಮಾಜಿಕ-ಶೈಕ್ಷಣಿಕ ಹಿಂದುಳಿತದ ಆಧಾರದ ಮೇಲೆ ಅವಕಾಶ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.
ನಗರಾಭಿವೃದ್ಧಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, “ಸಮಾಜದ ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಯುವಜನರಿಗೆ ಉದ್ಯೋಗಾವಕಾಶ ತಲುಪಿಸುವುದು ನಮ್ಮ ಸರ್ಕಾರದ ಮೂಲ ಉದ್ದೇಶವಾಗಿದೆ. ಶಿಕ್ಷಣವು ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗೆ ಪ್ರಮುಖ ಸಾಧನ. ಯುವಜನರು ಉತ್ತಮ ಶಿಕ್ಷಣ ಪಡೆದು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು,” ಎಂದು ಕರೆ ನೀಡಿದರು.
ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಸಮಾಜದ ಸಂಘಟನೆ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಶಾಸಕರಾಗಿ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಸಮಾರಂಭಕ್ಕೂ ಮುನ್ನ ಪಟ್ಟಣದ ಕೆಇಬಿ ಕಚೇರಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ಅವರ ಭಾವಚಿತ್ರಗಳನ್ನು ಬೆಳ್ಳಿ ರಥದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಲಾಯಿತು. ಸ್ವಾಮೀಜಿಗಳು ಮತ್ತು ಗಣ್ಯರ ಉಪಸ್ಥಿತಿಯಲ್ಲಿ, ವಿವಿಧ ಜಾನಪದ ಕಲಾತಂಡಗಳ ಜತೆ ಬಸ್ ನಿಲ್ದಾಣ ಮತ್ತು ಮಹಾವೀರ ಸರ್ಕಲ್ ಮಾರ್ಗವಾಗಿ ಸಾಗಿ ಜಯಚಾಮರಾಜೇಂದ್ರ ಕ್ರೀಡಾಂಗಣದಲ್ಲಿ ಮೆರವಣಿಗೆ ಮುಕ್ತಾಯಗೊಂಡಿತು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಿ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದ ಬಸವ ಮೂರ್ತಿ ಚೆನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಕೋಟೆ ಎಂ. ಶಿವಣ್ಣ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಮಾಜಿ ಸಂಸದ ಚಂದ್ರಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯ ಸಿ. ರಮೇಶ್, ಅರುಣ್ ಕುಮಾರ್ ಅವರು ಉಪಸ್ಥಿತರಿದ್ದು ಮಾತನಾಡಿದರು.
ಅಲ್ಲದೆ, ಮಾದರ ಮಹಾಸಭಾ ಅಧ್ಯಕ್ಷ ಪರಶಿವಮೂರ್ತಿ, ಬೆಟ್ಟ ಸ್ವಾಮಿ, ಬಾಬು ಜಗಜೀವನರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ. ತಿಮ್ಮಯ್ಯ, ಮಾಜಿ ಅಧ್ಯಕ್ಷ ಪಿ. ನಾಗರಾಜು, ಉಪಾಧ್ಯಕ್ಷ ಉಡ ನಾಗರಾಜು, ಸರಗೂರು ಉಪಾಧ್ಯಕ್ಷ ಶಿವರಾಜು, ಪ್ರಧಾನ ಕಾರ್ಯದರ್ಶಿ ಚೆಲುವರಾಜು, ನಿರ್ದೇಶಕರಾದ ಶಿವಯ್ಯ, ನಾಗರಾಜು, ಹರೀಶ್, ಕಾಳಪಾಜ್ಜಿ ಹಾಗೂ ಮಾದರ ಮಹಾಸಭೆಯ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಮಾಜದ ಮುಖಂಡರು ಭಾಗವಹಿಸಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
