ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ED) ತನಿಖೆ ಎದುರಿಸುತ್ತಿರುವ ಬಿ. ನಾಗೇಂದ್ರ ಅವರು ನ್ಯಾಯಾಲಯದ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ, ಕೋರ್ಟ್ ಅನುಮತಿ ಪಡೆಯದೇ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಜುಲೈ 15 ಮತ್ತು ಜುಲೈ 26 ರಂದು ಬಿ. ನಾಗೇಂದ್ರ ಅವರು ನ್ಯಾಯಾಲಯದ ಯಾವುದೇ ಪೂರ್ವಾನುಮತಿ ಪಡೆಯದೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ದೆಹಲಿ ಪ್ರವಾಸಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ವಿಮಾನ ನಿಲ್ದಾಣದ ಪ್ರಮುಖ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿ, ನ್ಯಾಯಾಲಯದ ಕಣ್ಣಿಗೆ ಮಣ್ಣೆರಚಿ ದೆಹಲಿಗೆ ಓಡಾಡುವಷ್ಟು ಅಧಿಕಾರದ ಮದ ಏರಿದೆಯೇ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಒಂದೆಡೆ ಇಡಿ ತನಿಖೆಗೆ ಕಾಲಾವಕಾಶ ಕೋರುತ್ತಾ, ಇನ್ನೊಂದೆಡೆ ನ್ಯಾಯಾಲಯದ ಅನುಮತಿಯನ್ನೇ ಪಡೆಯದೆ ಪ್ರವಾಸ ಬೆಳೆಸುವುದು ಕಾಂಗ್ರೆಸ್ ಪಕ್ಷಕ್ಕೆ ಕಾನೂನು ಹಾಗೂ ನ್ಯಾಯಾಂಗದ ಮೇಲಿರುವ ಅಸಲಿ ಗೌರವವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಇದಲ್ಲದೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನೇರವಾಗಿ ಪ್ರಶ್ನೆ ಎಸೆದಿರುವ ಅಶೋಕ್, ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಆದೇಶ ದೊಡ್ಡದೋ ಅಥವಾ ಹೈಕಮಾಂಡ್ ಆದೇಶ ದೊಡ್ಡದೋ? ಭ್ರಷ್ಟಾಚಾರ ಮತ್ತು ಕಾನೂನು ಉಲ್ಲಂಘನೆಯ ಆರೋಪ ಎದುರಿಸುತ್ತಿರುವ ವ್ಯಕ್ತಿಗೆ ರಾಜಕೀಯ ಅಭಯ ನೀಡುವುದೇ ನಿಮ್ಮ ಪಾರದರ್ಶಕ ಆಡಳಿತವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಈ ಗಂಭೀರ ಬೆಳವಣಿಗೆಯ ಕುರಿತು ರಾಜ್ಯದ ಜನತೆಗೆ ತಕ್ಷಣವೇ ಸ್ಪಷ್ಟನೆ ನೀಡಬೇಕು ಹಾಗೂ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಕಳಂಕಿತ ಸಚಿವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಆರ್. ಅಶೋಕ್ ಪ್ರಬಲವಾಗಿ ಒತ್ತಾಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
