ಸರಗೂರು: ಮಕ್ಕಳಲ್ಲಿ ಜಂತುಹುಳು ಸೋಂಕಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟಿ ಅವರ ದೈಹಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೆರವಾಗುವ ನಿಟ್ಟಿನಲ್ಲಿ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಂತ ಮಹತ್ವದ್ದಾಗಿದೆ ಎಂದು ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಚಂದ್ರಶೇಖರ ತಿಳಿಸಿದರು.
ತಾಲೂಕಿನ ಬಿ. ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಟಕೆರೆ ಭೋವಿ ಕಾಲೋನಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸೋಮವಾರ ಬಿ. ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗುವ ಇಂತಹ ಜಾಗೃತಿ ಹಾಗೂ ಮಾತ್ರೆ ವಿತರಣಾ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ ಹಾಗೂ ದೈಹಿಕ ಬೆಳವಣಿಗೆಯ ಕುಂಠಿತದಂತಹ ಸಮಸ್ಯೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯ ಸಲಹೆಗಳನ್ನು ಕಡ್ಡಾಯವಾಗಿ ಪಾಲಿಸಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗಳು ಕಿವಿಮಾತು ಹೇಳಿದರು.
ಆರೋಗ್ಯವೇ ಶೈಕ್ಷಣಿಕ ಪ್ರಗತಿಗೆ ಆಧಾರ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವಸತಿ ಶಾಲೆಯ ಮುಖ್ಯ ಶಿಕ್ಷಕರಾದ ಕಾಳಸ್ವಾಮಿ ಅವರು, “ವಿದ್ಯಾರ್ಥಿಗಳ ಆರೋಗ್ಯವೇ ಅವರ ಶೈಕ್ಷಣಿಕ ಪ್ರಗತಿಗೆ ಪ್ರಮುಖ ಆಧಾರವಾಗಿದೆ. ಜಂತುಹುಳು ಸೋಂಕು ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುತ್ತವೆ. ವಿದ್ಯಾರ್ಥಿಗಳು ಆರೋಗ್ಯ ಸಿಬ್ಬಂದಿಯ ನಿರ್ದೇಶನದಂತೆ ಮಾತ್ರೆ ಸೇವಿಸುವುದರ ಜೊತೆಗೆ ವೈಯಕ್ತಿಕ ಹಾಗೂ ಸುತ್ತಮುತ್ತಲಿನ ಪರಿಸರದ ಸ್ವಚ್ಛತೆಗೆ ಆದ್ಯತೆ ನೀಡಬೇಕು” ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷತಾ ಅಧಿಕಾರಿ ಅನಿತಾ, ವಸತಿ ಶಾಲೆಯ ವಾರ್ಡನ್ ಪದ್ಮರಾಜ್, ಆಶಾ ಕಾರ್ಯಕರ್ತೆ ಅನಿತಾ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
