ಔರಾದ್ (ಬೀದರ್): ಔರಾದ್ ತಾಲ್ಲೂಕಿನ ಬೆಳಕುಣಿ (ಚೌದ್ರಿ) ಯಿಂದ ಮುಂಗನಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ರಸ್ತೆ ಮಧ್ಯೆ ಬಿದ್ದಿರುವ ಭಾರೀ ಗುಂಡಿಗಳಿಂದಾಗಿ ವಾಹನ ಸವಾರರು ದಿನನಿತ್ಯ ಜೀವಭಯದಲ್ಲೇ ಸಂಚರಿಸುವ ದುಸ್ಥಿತಿ ನಿರ್ಮಾಣವಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ತುಂಬಿಕೊಂಡಿದ್ದು, ಗುಂಡಿಗಳ ಆಳ ಎಷ್ಟು ಎಂಬುದು ಅಂದಾಜಿಸಲಾಗದೆ ಸವಾರರು ಪರದಾಡುತ್ತಿದ್ದಾರೆ. ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರು ಹೊಂಡಗಳಲ್ಲಿ ಜಾರಿಬಿದ್ದು ಅಪಘಾತಕ್ಕೆ ಈಡಾಗುವ ಭೀತಿ ಎದುರಾಗಿದೆ.
ಈ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ರಸ್ತೆ ಹದಗೆಟ್ಟಿರುವುದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಯಾವುದೇ ಅನಾಹುತ ಅಥವಾ ದೊಡ್ಡ ಮಟ್ಟದ ಅಪಘಾತ ಸಂಭವಿಸುವ ಮುನ್ನವೇ ಲೋಕೋಪಯೋಗಿ ಇಲಾಖೆ (PWD) ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.
ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಹಾಗೂ ವಾಹನ ಸವಾರರ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಜೀವನ್ ಮಾಳೆಗೆ ಅವರು ಸಂಬಂಧಪಟ್ಟ ಇಲಾಖೆಗೆ ಆಗ್ರಹಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
