ಬೀದರ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಸಮೀಪದ ಹೈದರಾಬಾದ್–ಮುಂಬೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಸಂಜೆ ಆಟೋ (ಟಂಟಂ) ಹಾಗೂ ಟ್ಯಾಂಕರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಮೃತರೆಲ್ಲರೂ ಬೀದರ್ ತಾಲೂಕಿನ ಸಿಂಧೋಲ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಜಗೀರಾ ಗ್ರಾಮದವರು ಎಂದು ತಿಳಿದುಬಂದಿದೆ. ಟಂಟಂ ಚಾಲಕ ದೇವಿದಾಸ ಸೇರಿದಂತೆ ಕೂಲಿ ಕಾರ್ಮಿಕರಾದ ರೇಖಾ, ರೇಷ್ಮಾ, ಕವಿತಾ ಹಾಗೂ ಇತರರು ಸಾವನ್ನಪ್ಪಿದ್ದಾರೆ. ಆಟೋದಲ್ಲಿ ಒಟ್ಟು 11 ಜನ ಕಾರ್ಮಿಕರಿದ್ದರು ಎನ್ನಲಾಗಿದ್ದು, ಮೃತ ಕಾರ್ಮಿಕರು ಪ್ರತಿದಿನ ಕೂಲಿ ಕೆಲಸಕ್ಕೆಂದು ತೆಲಂಗಾಣಕ್ಕೆ ತೆರಳುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಸಂಜೆ ವಾಪಸ್ ಊರಿಗೆ ಮರಳುವಾಗ ಈ ದುರಂತ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕೆಲ ಕಾರ್ಮಿಕರ ಮೃತದೇಹಗಳು ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಬೀದರ್ ಹಾಗೂ ತೆಲಂಗಾಣ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಜಹೀರಾಬಾದ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಾಜಗೀರಾ ಗ್ರಾಮದ ಜನರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಘಟನೆ ಕುರಿತು ಬೀದರನಲ್ಲಿ ಹೇಳಿಕೆ ನೀಡಿದ ಅವರು, ಇದು ಅತ್ಯಂತ ಹೃದಯವಿದ್ರಾವಕ ಘಟನೆಯಾಗಿದೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲು ತೆಲಂಗಾಣದ ಆಡಳಿತದೊಂದಿಗೆ ಸತತ ಸಂಪರ್ಕದಲ್ಲಿ ಇರುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆ ಬೀದರ್ ಜಿಲ್ಲಾಡಳಿತಕ್ಕೆ ಸೂಚಿಸಿದ್ದು, ಈ ಕಷ್ಟದ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ಕರ್ನಾಟಕ ಸರ್ಕಾರ ನಿಲ್ಲುತ್ತದೆ ಎಂದು ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.
ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಈಶ್ವರ ಖಂಡ್ರೆ
ತೆಲಂಗಾಣದ ಜಹೀರಾಬಾದ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಬೀದರ್ ತಾಲೂಕಿನ ರಾಜಗೀರಾ ಗ್ರಾಮದ 6 ಮಂದಿ ಮೃತಪಟ್ಟಿದ್ದು, ಅಪಘಾತದಲ್ಲಿ ಗಾಯಗೊಂಡು ಬೀದರ್ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರು ಬುಧವಾರ ಬೆಳಿಗ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಉತ್ತಮ ಚಿಕಿತ್ಸೆ ಹಾಗೂ ಸೂಕ್ತ ವೈದ್ಯಕೀಯ ಆರೈಕೆ ನೀಡುವಂತೆ ವೈದ್ಯರು ಮತ್ತು ಅಧಿಕಾರಿಗಳಿಗೆ ಸೂಚಿಸಿದ ಅವರು, ಅಪಘಾತದಲ್ಲಿ ಮೃತಪಟ್ಟ ಪ್ರತಿಯೊಂದು ಕುಟುಂಬಕ್ಕೂ ಕರ್ನಾಟಕ ಸರ್ಕಾರದ ವತಿಯಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
