ತುಮಕೂರು: ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಮತ್ತು ಅನುಷ್ಠಾನದಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮಾಜಿಕ ಸಾಮರಸ್ಯ ಹಾಗೂ ಕೌಶಲ್ಯಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ.
ಈ ಕುರಿತು ಇಂದು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ 22 ಸಾವಿರಕ್ಕೂ ಹೆಚ್ಚು ಭಾರತ್ ಜೋಡೋ ಯುವ ಮಿಷನ್ನಡಿ ಸಂಘಗಳನ್ನು ನೋಂದಣಿ ಮಾಡಿಕೊಳ್ಳಲಾಗಿರುವುದಾಗಿ ಹಾಗೂ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಚಟುವಟಿಕೆ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ ನೀಡಿದರು.
ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ಸಂಘಗಳನ್ನು ಸ್ಥಾಪಿಸಿ, ಯುವಜನರನ್ನು ಸಮುದಾಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
“ಯೋಜನೆಯಡಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ಸಂಘಗಳನ್ನು ಸ್ಥಾಪಿಸಿ, ಯುವಜನರನ್ನು ಸಮುದಾಯ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.”
— ಶುಭ ಕಲ್ಯಾಣ್, ಜಿಲ್ಲಾಧಿಕಾರಿ
ತುಮಕೂರು ಜಿಲ್ಲೆಯಲ್ಲಿ ಯೋಜನೆಯ ಅನುಷ್ಠಾನಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದ್ದು, ಸಂಘಗಳ ರಚನೆ ಮತ್ತು ಚಟುವಟಿಕೆಗಳ ಅನುಷ್ಠಾನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ ಪರಿಣಾಮ ಜಿಲ್ಲೆ ರಾಜ್ಯದಲ್ಲೇ ಮೊದಲ ಸ್ಥಾನ ಹೊಂದಿದ್ದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.
ಪ್ರತಿ ಸಂಘದಲ್ಲಿ ಕ್ರೀಡೆ, ಫಿಟ್ನೆಸ್, ಕೌಶಲ್ಯಾಭಿವೃದ್ಧಿ, ಸಾಂಸ್ಕೃತಿಕ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತಿದೆ. ಮಾಸಿಕ ಸಭೆಗಳ ಮೂಲಕ ಸಂಘಗಳ ಚಟುವಟಿಕೆಗಳು, ಯುವಜನರ ಪಾಲ್ಗೊಳ್ಳುವಿಕೆ ಮತ್ತು ಯೋಜನೆಯ ಪ್ರಗತಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು. ಭಾರತ್ ಜೋಡೋ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಸಮುದಾಯದ ಮೇಲಿನ ಬದ್ಧತೆಯನ್ನು ಬೆಳೆಸುವ ಗುರಿ ಹೊಂದಲಾಗಿದೆ. ತುಮಕೂರು ಜಿಲ್ಲೆಯ ಈ ಸಾಧನೆ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮಾದರಿಯಾಗಿದ್ದು, ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಸಂಕಲ್ಪ ಹೊಂದಿದೆ ಎಂದು ತಿಳಿಸಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಸಂಜೀವಪ್ಪ ಹಾಗೂ ಈಶ್ವರಪ್ಪ, ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿರ್ದೇಶಕ ಸಂತೋಷ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
