ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಖಂಡಿಕೇರಿ ಗ್ರಾಮದ ಹೊಲವೊಂದರಲ್ಲಿ ಯಾವುದೇ ಸರ್ಕಾರಿ ಅನುಮತಿ ಇಲ್ಲದೆ ಕಾನೂನುಬಾಹಿರವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಔರಾದ್–ಬಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ (ಐಪಿಎಸ್) ಅವರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಚಂದ್ರಕಾಂತ ಪೂಜಾರಿ ಹಾಗೂ ಭಾಲ್ಕಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಲ್ಲಪ್ಪ ನಂದಗಾಂವಿ ಅವರ ಮುಂದಾಳತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಔರಾದ್–ಬಿ ವೃತ್ತದ ಸಿಪಿಐ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಪಿಎಸ್ ಐ ವಸೀಮ್ ಪಟೇಲ್ ಹಾಗೂ ಪೊಲೀಸ್ ಸಿಬ್ಬಂದಿ ಖಂಡಿಕೇರಿ ಗ್ರಾಮದ ಹೊಲಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ 100 ಹಸಿ ಗಾಂಜಾ ಗಿಡಗಳು ಪತ್ತೆಯಾಗಿವೆ.
ನಂತರ ಪತ್ರಾಂಕಿತ ಅಧಿಕಾರಿಯಾಗಿರುವ ಔರಾದ್ ತಹಶೀಲ್ದಾರ್ ಅವರ ಸಮಕ್ಷಮದಲ್ಲಿ ಗಾಂಜಾ ಗಿಡಗಳನ್ನು ಕಿತ್ತು ವಶಕ್ಕೆ ಪಡೆಯಲಾಗಿದ್ದು, ಅವುಗಳ ಒಟ್ಟು ತೂಕ 60 ಕೆ.ಜಿ. 430 ಗ್ರಾಂ ಎಂದು ಅಂದಾಜಿಸಲಾಗಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ಸುಮಾರು ₹30,21,500 ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
