ಬೀದರ್: ಜಿಲ್ಲೆಯನ್ನು ತಕ್ಷಣ ‘ಬರಪೀಡಿತ ಜಿಲ್ಲೆ’ ಎಂದು ಘೋಷಿಸುವುದು, ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದು ಹಾಗೂ ಬೆಳೆ ಹಾನಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ಒದಗಿಸುವುದು ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ರೈತ ಸಂಘಟನೆಗಳು ಹಾಗೂ ಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬೃಹತ್ ರಸ್ತೆ ತಡೆ ಪ್ರತಿಭಟನೆ ನಡೆಯಿತು.
ಬೀದರ್ ನಗರದ ನೌಬಾದ್ ನ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಜಿಲ್ಲೆಯ ವಿವಿಧ ತಾಲೂಕುಗಳ ನೂರಾರು ರೈತರು ಹಾಗೂ ಸಂಘಟಕರು ಕೆಲಕಾಲ ಬೀದರ್–ಭಾಲ್ಕಿ ಹಾಗೂ ಬೀದರ್–ಹುಮನಾಬಾದ್ ಪ್ರಮುಖ ಹೆದ್ದಾರಿಗಳನ್ನು ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ಬಿರಾದಾರ ಅವರು, ರೈತರು ಪ್ರತಿವರ್ಷ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ವರ್ಷವೂ ಮುಂಗಾರು ಮಳೆ ಸಮರ್ಪಕವಾಗಿ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಒಣಗುತ್ತಿದ್ದು, ರೈತರು ಆರ್ಥಿಕವಾಗಿ ನಲುಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಪರಿಸ್ಥಿತಿ ಪರಿಗಣಿಸಿ ಬೀದರ್ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಎಂದು ಘೋಷಿಸಬೇಕು ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು. ಇದರ ಜೊತೆಗೆ, ಬಿಎಸ್ಎಸ್ಕೆ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡದೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಪುನರಾರಂಭಿಸಬೇಕು ಹಾಗೂ ಕಾರ್ಮಿಕರ ಬಾಕಿ ವೇತನವನ್ನು ಶಾಸನಬದ್ಧವಾಗಿ ತಕ್ಷಣವೇ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಾರಂಜಾ ಮುಳುಗಡೆ ಸಂತ್ರಸ್ತರಿಗೆ ವೈಜ್ಞಾನಿಕ ರೀತಿಯಲ್ಲಿ ಸೂಕ್ತ ಪರಿಹಾರ ನೀಡಬೇಕು, ಏತ ನೀರಾವರಿ ಯೋಜನೆ ಮೂಲಕ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಕೃಷಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆ ಏಳು ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ಪೂರೈಸಬೇಕು ಎಂದು ರೈತರು ಆಗ್ರಹಿಸಿದರು. ಕಾಡುಪ್ರಾಣಿಗಳಿಂದ ರೈತರ ಬೆಳೆಗಳಿಗೆ ಆಗುತ್ತಿರುವ ಹಾನಿ ತಡೆಯಲು ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬುದು ಕೂಡ ಪ್ರಮುಖ ಬೇಡಿಕೆಯಾಗಿತ್ತು.
ರೈತರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಜಾನುವಾರುಗಳು ಹಾಗೂ ಎತ್ತಿನ ಬಂಡಿಗಳೊಂದಿಗೆ ರಾಷ್ಟ್ರೀಯ ಹೆದ್ದಾರಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ, ಹೋರಾಟಗಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶೋಭಾವತಿ ಕಾರಭಾರಿ, ಶೇಷರಾವ ಕಣಜಿ, ಮಲ್ಲನಗೌಡ ಪಾಟೀಲ, ಕಾರಂಜಾ ಮುಳುಗಡೆ ಹಿತರಕ್ಷಣಾ ಸಮಿತಿ ನಿರ್ದೇಶಕ ರಾಜಕುಮಾರ ಕೋಸಂ, ಚಂದ್ರಶೇಖರ ಪಾಟೀಲ, ಹಾಗೂ ವಿವಿಧ ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ನೂರಾರು ರೈತರು ಪಾಲ್ಗೊಂಡಿದ್ದರು.
ವರದಿ: ಅರವಿಂದ್, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
