ಔರಾದ್ ತಾಲೂಕಿನ ಧೂಪತಮಹಾಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಸಿಸಿಟಿ (ಕಾಂಟೂರ್ ಟ್ರೆಂಚ್) ಕೆಲಸ ನಿರ್ವಹಿಸುತ್ತಿರುವ ಅಕುಶಲ ಕೂಲಿ ಕಾರ್ಮಿಕರಿಗಾಗಿ ಭಾನುವಾರ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಕಾಮಗಾರಿ ಸ್ಥಳದಲ್ಲೇ ನಡೆದ ಈ ಶಿಬಿರದಲ್ಲಿ ಪುರುಷರು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 330 ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ಹಾಗೂ ಔಷಧಿಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಹಾಗೂ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಅವರು, ಕಠಿಣ ದೈಹಿಕ ಶ್ರಮ ವಹಿಸಿ ಕೆಲಸ ಮಾಡುವ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕಾಮಗಾರಿ ಸ್ಥಳದಲ್ಲೇ ಈ ತಪಾಸಣೆ ಹಮ್ಮಿಕೊಳ್ಳಲಾಗಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲೂರೆ ಮಾತನಾಡಿ, ಕೂಲಿ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು. ಇದರಿಂದ ಅಧಿಕ ರಕ್ತದೊತ್ತಡ ಹಾಗೂ ಮಧುಮೇಹದಂತಹ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಯೋಗದೊಂದಿಗೆ ನಡೆದ ಈ ಶಿಬಿರದಲ್ಲಿ ಅಧಿಕ ರಕ್ತದೊತ್ತಡ, ಮಧುಮೇಹ, ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣ, ತೂಕ ಹಾಗೂ ಶೀತ, ಕೆಮ್ಮು, ನೆಗಡಿಯಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಪರೀಕ್ಷೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಬಿಎಚ್ ಇಒ ಅನಿತಾ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಂದಕಿಶೋರ, ಮಹಾದೇವ ಡಾವರಗಾವೆ, ಡಿಇಒ ಪ್ರಕಾಶ, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್, ಶರಣಪ್ಪ ಸಾವಳೆ, ಎನ್ಆರ್ ಎಲ್ ಎಮ್ ಹಾಗೂ ಜಿಕೆಎಮ್ ಸಿಬ್ಬಂದಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಕೂಲಿಕಾರ್ಮಿಕರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
