ಬೆಂಗಳೂರು: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಪ್ರಮುಖ ಉದ್ಯಮಿ ಗೌತಮ್ ಅದಾನಿ (Gautam Adani) ಅವರು ಸದಾಶಿವನಗರದಲ್ಲಿರುವ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ಹಾಗೂ ಉದ್ಯಮ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಗೆ ಭೇಟಿ ನೀಡಿದ್ದ ಗೌತಮ್ ಅದಾನಿ, ಅಲ್ಲಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ತೆರಳುವ ಮಾರ್ಗಮಧ್ಯೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು. ಈ ವೇಳೆ ರಾಜ್ಯದಲ್ಲಿನ ಉದ್ಯಮ ಅವಕಾಶಗಳ ಜೊತೆಗೆ, ಬೆಂಗಳೂರಿನ ಬಹುನಿರೀಕ್ಷಿತ ಸುರಂಗ ರಸ್ತೆ ಯೋಜನೆ (Bengaluru Tunnel Road) ಟೆಂಡರ್‌ಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.
ಒಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗೌತಮ್ ಅದಾನಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧವನ್ನು ತೀವ್ರವಾಗಿ ಟೀಕಿಸುತ್ತಿದ್ದರೆ, ಇನ್ನೊಂದೆಡೆ ಕರ್ನಾಟಕದ ಕಾಂಗ್ರೆಸ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗೌತಮ್ ಅದಾನಿ ಭೇಟಿಯಾಗಿ ಚರ್ಚಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಈ ಭೇಟಿಯ ಕುರಿತು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಸಿಎಂ ಡಿ.ಕೆ. ಶಿವಕುಮಾರ್, “ಗೌತಮ್ ಅದಾನಿ ಅವರಿಗೆ ಕರ್ನಾಟಕದಲ್ಲಿ ಹಲವು ಉದ್ಯಮಗಳಿವೆ. ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿರುವುದರಿಂದ ಅವರು ಸೌಜನ್ಯಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ” ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
