ಹೊಳೆನರಸೀಪುರ: ತಾಲ್ಲೂಕಿನ ತಾತನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾಯಂ ವೈದ್ಯಾಧಿಕಾರಿಗಳಿಲ್ಲದೆ ರೋಗಿಗಳು ದಿನನಿತ್ಯ ಪರದಾಡುವಂತಾಗಿದ್ದು, ಗ್ರಾಮೀಣ ಭಾಗದ ಆರೋಗ್ಯ ಸೇವೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಸುಮಾರು 24 ಹಳ್ಳಿಗಳು ಈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುತ್ತವೆ. ಸುತ್ತಮುತ್ತಲಿನ ಸಾವಿರಾರು ಗ್ರಾಮಸ್ಥರಿಗೆ ಇದೇ ಪ್ರಮುಖ ಆಸ್ಪತ್ರೆಯಾಗಿದ್ದರೂ, ಇಲ್ಲಿ ಕಾಯಂ ವೈದ್ಯರಿಲ್ಲದೆ ಚಿಕಿತ್ಸೆಗಾಗಿ ಬರುವ ವೃದ್ಧರು, ಗರ್ಭಿಣಿಯರು ಹಾಗೂ ಮಕ್ಕಳು ಬರಿಗೈಯಲ್ಲಿ ವಾಪಸ್ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿದ್ದರೂ, ವೈದ್ಯರ ಅನುಪಸ್ಥಿತಿಯಿಂದಾಗಿ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುತ್ತಿಲ್ಲ.
ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ವೈದ್ಯರು ಹಿಂಜರಿಯುತ್ತಿದ್ದು, ಗುತ್ತಿಗೆ ಆಧಾರದ ಮೇಲೆ ಬರುವ ವೈದ್ಯರು ಕೆಲವೇ ದಿನಗಳಲ್ಲಿ ಬೇರೆಡೆ ತೆರಳುತ್ತಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಇತರೆ ಸಿಬ್ಬಂದಿಯೂ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.
ಗ್ರಾಮಸ್ಥರ ದೂರಿಗೆ ಸ್ಪಂದಿಸಿರುವ ತಾಲ್ಲೂಕು ಆರೋಗ್ಯಾಧಿಕಾರಿ (THO) ಡಾ. ರಾಜೇಶ್ ಅವರು, “ಗುರುವಾರದೊಳಗೆ ಆಸ್ಪತ್ರೆಗೆ ಪರ್ಯಾಯ ವೈದ್ಯರನ್ನು ನಿಯೋಜಿಸಲಾಗುವುದು” ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಮಾತನಾಡಿರುವ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನ, “ಅಧಿಕಾರಿಗಳು ನೀಡಿದ ಭರವಸೆಯಂತೆ ಗುರುವಾರದೊಳಗೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದಿದ್ದರೆ, 24 ಹಳ್ಳಿಗಳ ಗ್ರಾಮಸ್ಥರೊಂದಿಗೆ ಆಸ್ಪತ್ರೆಯ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರಾದ ನಾಗರಾಜು, ಪ್ರಮುಖರಾದ ಚಿಕ್ಕೇಗೌಡ, ಶಿವಣ್ಣ, ಮಂಜಣ್ಣ, ಕಾವೇರಮ್ಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ವರದಿ: ಮಂಜು ಶ್ರವಣೂರು, ಹೊಳೆನರಸೀಪುರ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
