ತಿಪಟೂರು: ತೀವ್ರ ಮಳೆ ಕೊರತೆಯಿಂದ ಕಂಗಾಲಾಗಿರುವ ತಿಪಟೂರು ತಾಲೂಕನ್ನು ಕೂಡಲೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಅಧ್ಯಕ್ಷ ಬಸ್ತಿಹಳ್ಳಿ ರಾಜಣ್ಣ ರಾಜ್ಯ ಸರ್ಕಾರವನ್ನು ಬಲವಾಗಿ ಒತ್ತಾಯಿಸಿದ್ದಾರೆ.
ನಗರದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟಿದ್ದು ಕೃಷಿ ಚಟುವಟಿಕೆಗಳು ಸಂಪೂರ್ಣ ನೆಲಕಚ್ಚಿವೆ ಎಂದರು. ರಾಜ್ಯಾದ್ಯಂತ ಶೇ. 34ರಷ್ಟು ಮಳೆ ಕೊರತೆ ದಾಖಲಾಗಿದ್ದು 190 ತಾಲೂಕುಗಳು ತೀವ್ರ ಸಂಕಷ್ಟದಲ್ಲಿವೆ. ಮೊದಲ ಹಂತದಲ್ಲಿ ಸರ್ಕಾರ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಗುರುತಿಸುವ ಪ್ರಕ್ರಿಯೆ ನಡೆಸಿದೆ. ತುಮಕೂರು ಜಿಲ್ಲೆಯ ಬಹುತೇಕ ತಾಲೂಕುಗಳನ್ನು ಈ ಪಟ್ಟಿಗೆ ಸೇರಿಸಲಾಗಿದ್ದರೂ, ಭೀಕರ ಬರ ಎದುರಿಸುತ್ತಿರುವ ತಿಪಟೂರು ತಾಲ್ಲೂಕನ್ನು ಅನ್ಯಾಯವಾಗಿ ಕೈಬಿಡಲಾಗಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಮಳೆಯಿಲ್ಲದೆ ಬಿತ್ತನೆ ಸಂಪೂರ್ಣ ವಿಳಂಬವಾಗಿದ್ದು ಈಗಾಗಲೇ ಬಿತ್ತಿದ್ದ ಬೆಳೆಗಳು ಒಣಗಿ ನಿಂತಿವೆ. ತೆಂಗು ಮತ್ತು ರಾಗಿ ಸೇರಿದಂತೆ ಪ್ರಮುಖ ವಾಣಿಜ್ಯ ಹಾಗೂ ಆಹಾರ ಬೆಳೆಗಳು ನಾಶದ ಅಂಚಿಗೆ ತಲುಪಿವೆ. ಅಂತರ್ಜಲ ಮಟ್ಟ ಪಾತಾಳಕ್ಕೆ ಕುಸಿದಿದ್ದು ಕೊಳವೆಬಾವಿಗಳು ಬತ್ತಿ ಹೋಗುತ್ತಿವೆ. ಜನ-ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ತೀವ್ರ ಅಭಾವ ಸೃಷ್ಟಿಯಾಗಿದೆ. ಸಾಲ ಮಾಡಿ ಕೃಷಿ ಮಾಡಿದ್ದ ಅನ್ನದಾತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸರ್ಕಾರ ಕೂಡಲೇ ತಾರತಮ್ಯ ಧೋರಣೆ ಬಿಟ್ಟು ತಿಪಟೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು. ಅಲ್ಲದೆ ಬೆಳೆ ಪರಿಹಾರ ವಿತರಣೆ, ಮೇವು ಬ್ಯಾಂಕ್ ಸ್ಥಾಪನೆ ಹಾಗೂ ರೈತರ ಸಾಲ ಮನ್ನಾ ಸೇರಿದಂತೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ರೈತ ಸಂಘದ ಉಪಾಧ್ಯಕ್ಷ ರೇಣುಕಾ ಮೂರ್ತಿ ಕುರುಬರಹಳ್ಳಿ, ಪ್ರಮುಖ ಮುಖಂಡರಾದ ಯೋಗಾನಂದಸ್ವಾಮಿ, ನವೀದ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
