ವಿಜಯನಗರ: ಗ್ರಾಮೀಣ ಮತ್ತು ಬಡ ಕುಟುಂಬಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಕನಸಿಗೆ ದೊಡ್ಡ ಮಟ್ಟದ ಬಲ ತುಂಬುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹಾಗೂ ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳಲ್ಲಿ ಶೇಕಡಾ 7.5 ರಷ್ಟು ವಿಶೇಷ ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿಗಳು ಅಧಿಕೃತವಾಗಿ ಘೋಷಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯಮಂತ್ರಿಗಳು, ಹಳ್ಳಿಗಳ ಸರ್ಕಾರಿ ಶಾಲೆಗಳಲ್ಲಿ ಓದುವ ಬಡ ಹಾಗೂ ಸಾಮಾನ್ಯ ವರ್ಗದ ಮಕ್ಕಳಿಗೆ ಶೈಕ್ಷಣಿಕ ಮತ್ತು ವೃತ್ತಿಪರ ರಂಗಗಳಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.
ಸರಕಾರಿ ಶಾಲೆಗಳಲ್ಲಿ ಕಲಿಯುವ ಬಹುತೇಕ ಮಕ್ಕಳು ಗ್ರಾಮೀಣ ಹಾಗೂ ಬಡ ಹಿನ್ನೆಲೆಯಿಂದ ಬಂದವರಾಗಿರುತ್ತಾರೆ. ಆರ್ಥಿಕ ಅಡಚಣೆ ಹಾಗೂ ತೀವ್ರ ಸ್ಪರ್ಧೆಯಿಂದಾಗಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗ ಪಡೆಯುವಲ್ಲಿ ಈ ಮಕ್ಕಳು ಹಿಂದೆ ಉಳಿಯುತ್ತಿದ್ದಾರೆ. ಇದನ್ನು ಮನಗಂಡಿರುವ ಸರ್ಕಾರ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕವಾಗಿ ಶೇ. 7.5 ರಷ್ಟು ಮೀಸಲಾತಿಯನ್ನು ಜಾರಿಗೆ ತರಲು ಮುಂದಾಗಿದೆ.
ಈ ಹೊಸ ಮೀಸಲಾತಿ ನೀತಿಯಿಂದಾಗಿ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಹಾಗೂ ಸರಕಾರಿ ಉದ್ಯೋಗಗಳಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವಿಶೇಷ ಆದ್ಯತೆ ದೊರೆಯಲಿದೆ.
ಮುಂದಿನ ದಿನಗಳಲ್ಲಿ ಅಧಿಕೃತ ನಿಯಮಾವಳಿ ಪ್ರಕಟ:
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ. 7.5 ರಷ್ಟು ಮೀಸಲಾತಿ ಕಲ್ಪಿಸುವ ಕುರಿತಂತೆ ಸದ್ಯದಲ್ಲೇ ಸಮಗ್ರ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು. ಇದಕ್ಕೆ ಸಂಬಂಧಿಸಿದ ಸಂಪೂರ್ಣ ನಿಯಮಾವಳಿಗಳು, ಮಾರ್ಗಸೂಚಿಗಳು ಹಾಗೂ ಅಧಿಕೃತ ಆದೇಶವನ್ನು ಮುಂದಿನ ದಿನಗಳಲ್ಲಿ ಸರ್ಕಾರ ಪ್ರಕಟಿಸಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ 1 ರಿಂದ 10 ನೇ ತರಗತಿವರೆಗೆ ಗ್ರಾಮೀಣ ಪ್ರದೇಶದಲ್ಲೇ ಓದಿದ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ಗ್ರೂಪ್ ಹುದ್ದೆಗಳಿಗೆ ಶೇ. 25 ರಷ್ಟು ಹಾಗೂ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಶೇ. 15 ರಷ್ಟು ಮೀಸಲಾತಿ ನೀಡಲಾಗುತ್ತಿತ್ತು. ಈಗ ಹೊಸದಾಗಿ ಘೋಷಿಸಲಾಗಿರುವ ಶೇ. 7.5 ರಷ್ಟು ಮೀಸಲಾತಿಯು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ನಷ್ಟು ಹೆಚ್ಚಿನ ಶಕ್ತಿ ತುಂಬಲಿದೆ. ಸರ್ಕಾರದ ಈ ಮಹತ್ವದ ನಿರ್ಧಾರಕ್ಕೆ ಶೈಕ್ಷಣಿಕ ವಲಯ ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
