ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಜಿ ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಸಭಾಂಗಣದಲ್ಲಿ ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ಎತ್ತಿನಹೊಳೆ ಯೋಜನೆಯಡಿ ತುಮಕೂರು ಜಿಲ್ಲೆಗೆ ನೀರು ಹರಿಸಲು ಕೈಗೊಳ್ಳಲಾಗುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. ಕಾಮಗಾರಿಗಳ ಅನುಷ್ಠಾನದ ಹಂತ, ಪೂರ್ಣಗೊಳ್ಳಬೇಕಿರುವ ಕಾಮಗಾರಿಗಳು ಹಾಗೂ ಅವುಗಳಿಗೆ ಸಂಬಂಧಿಸಿದ ಅಗತ್ಯ ಕ್ರಮಗಳ ಕುರಿತು ಡಿಸಿಎಂ ವಿವರವಾಗಿ ಪರಿಶೀಲನೆ ನಡೆಸಿದರು.
ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ, ಕಾಮಗಾರಿಗಳ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಸಹಕಾರದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಕಾಮಗಾರಿಗಳ ಪ್ರಗತಿಗೆ ಅಡ್ಡಿಯಾಗಿರುವ ಸಮಸ್ಯೆಗಳನ್ನು ಗುರುತಿಸಿ, ಅವುಗಳನ್ನು ತ್ವರಿತವಾಗಿ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸುವ ಗುರಿಯನ್ನು ಸಾಧಿಸಲು ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಮಾನ್ಯ ಡಾ. ಜಿ. ಪರಮೇಶ್ವರ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕಾಮಗಾರಿಗಳಲ್ಲಿ ಯಾವುದೇ ವಿಳಂಬವಾಗದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಡಿಸಿಎಂ ಡಾ ಜಿ ಪರಮೇಶ್ವರ್ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ವಿಶೇಷ ಭೂಸ್ವಾಧೀನಾಧಿಕಾರಿಗಳು, ಎತ್ತಿನಹೊಳೆ ಯೋಜನೆಯ ಮುಖ್ಯ ಹಾಗೂ ಕಾರ್ಯಪಾಲಕ ಅಭಿಯಂತರರು, ಸಂಬಂಧಿಸಿದ ತಹಶೀಲ್ದಾರ್‌ಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
