ಬೀದರ್: ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಕಲ್ಪಿಸಲು ಉದ್ದೇಶಿಸಿರುವ ಶೇ.7.5ರ ವಿಶೇಷ ಮೀಸಲಾತಿ ಸೌಲಭ್ಯವನ್ನು, ಗ್ರಾಮೀಣ ಭಾಗದ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಂಘ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಗುರುನಾಥ್ ರೆಡ್ಡಿ ಅವರು, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರಿಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸಮಾನ ಹಾಗೂ ನ್ಯಾಯಯುತ ಅವಕಾಶ ಕಲ್ಪಿಸುವಂತೆ ಕೋರಿದ್ದಾರೆ.
ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ತಿದ್ದುಪಡಿ ತಂದು, ಗ್ರಾಮೀಣ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಶೇ.7.5ರ ವಿಶೇಷ ಮೀಸಲಾತಿ ಕಲ್ಪಿಸುವ ಕರಡು ಅಧಿಸೂಚನೆಯನ್ನು ಸಂಘ ಸ್ವಾಗತಿಸಿದೆ. ಗ್ರಾಮೀಣ ಹಾಗೂ ಗಡಿಭಾಗದ ತಾಲೂಕುಗಳಲ್ಲಿರುವ ಅನುದಾನರಹಿತ ಖಾಸಗಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ಹಾಗೂ ಪಿಯುಸಿ ವರೆಗೆ ವ್ಯಾಸಂಗ ಮಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ದೊರೆಯಬೇಕು.
ಗ್ರಾಮೀಣ ಭಾಗದ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಕೂಡ ಕರ್ನಾಟಕದವರೇ ಆಗಿದ್ದು, ಅವರಲ್ಲಿ ಬಹುತೇಕರು ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಕೇವಲ ಆಡಳಿತ ವ್ಯವಸ್ಥೆಯನ್ನು ಆಧರಿಸಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡುವುದು ಸಮಾನತೆಯ ತತ್ವಕ್ಕೆ ವಿರುದ್ಧವಾಗಿದೆ.
ಗ್ರಾಮೀಣ ಭಾಗದ ಪ್ರತಿಯೊಬ್ಬ ಪ್ರತಿಭಾವಂತ ಮತ್ತು ಅರ್ಹ ವಿದ್ಯಾರ್ಥಿಗೆ ವೃತ್ತಿಪರ ಶಿಕ್ಷಣದಲ್ಲಿ ನ್ಯಾಯಯುತ ಅವಕಾಶ ಸಿಗುವಂತೆ ಮಾಡಲು, ಸರ್ಕಾರವು ತಿದ್ದುಪಡಿ ನಿಯಮಗಳಲ್ಲಿ ಸೂಕ್ತ ಮಾರ್ಪಾಡುಗಳನ್ನು ಮಾಡಬೇಕು ಎಂದು ಗುರುನಾಥ್ ರೆಡ್ಡಿ ಅವರು ಆಗ್ರಹಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
