ಮಂಗಳೂರು: ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ಸಾಂಸ್ಕೃತಿಕ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸಚಿವ ಸಂಪುಟವು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಅನ್ವಯವಾಗುವಂತೆ ‘ತುಳು’ ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಇದರೊಂದಿಗೆ ‘ದಕ್ಷಿಣ ಕನ್ನಡ’ ಜಿಲ್ಲೆಯ ಹೆಸರನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯ ಆಲಿಸಲು ಒಂದು ತಿಂಗಳ ಕಾಲಾವಕಾಶ ನೀಡಿ ಕರಡು ಅಧಿಸೂಚನೆ (Draft Notification) ಹೊರಡಿಸಲು ನಿರ್ಧರಿಸಲಾಗಿದೆ.
ಪಡೀಲ್ ನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆದ ಐತಿಹಾಸಿಕ ಸಂಪುಟ ಸಭೆಯ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದರು. ಕರಾವಳಿ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಒಟ್ಟು ₹32,611 ಕೋಟಿ ವೆಚ್ಚದ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಅವಿಭಜಿತ ಜಿಲ್ಲೆಯ ಜನರ ದೀರ್ಘಕಾಲದ ಕನಸಾಗಿದ್ದ ತುಳು ಭಾಷೆಗೆ ಎರಡೂ ಜಿಲ್ಲೆಗಳ ಮಟ್ಟಿಗೆ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಸ್ಥಾನಮಾನ ನೀಡಲು ಸಂಪುಟ ಒಪ್ಪಿಗೆ ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಕರೆಯಬೇಕೆಂಬ ಪ್ರಸ್ತಾವನೆಗೆ ಸರ್ಕಾರದ ಒಲವಿದ್ದು, ಜನರ ಹಾಗೂ ಸಂಘ–ಸಂಸ್ಥೆಗಳ ಅಭಿಪ್ರಾಯ ಪಡೆಯಲು ಒಂದು ತಿಂಗಳ ಕಾಲ ಕರಡು ಅಧಿಸೂಚನೆ ಪ್ರಕಟಿಸಿ ಸಾರ್ವಜನಿಕ ಸಂವಾದಕ್ಕೆ (Public Debate) ಮುಕ್ತ ಅವಕಾಶ ನೀಡಲಾಗುತ್ತದೆ.
₹16,000 ಕೋಟಿ ಅನುದಾನವನ್ನು ಗ್ರಾಮೀಣಾಭಿವೃದ್ಧಿಗೆ ಹಾಗೂ ಉಳಿದ ₹16,000 ಕೋಟಿಗೂ ಅಧಿಕ ಮೊತ್ತವನ್ನು ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಭಾಗದ ರಸ್ತೆ, ಮೂಲಸೌಕರ್ಯ, ಬಂದರು ಹಾಗೂ ನಗರಾಭಿವೃದ್ಧಿ ಯೋಜನೆಗಳಿಗೆ ಕಾಯ್ದಿರಿಸಲಾಗಿದೆ.
320 ಕಿ.ಮೀ ಕರಾವಳಿ ತೀರ, ದ್ವೀಪಗಳು ಹಾಗೂ ಮಲೆನಾಡಿನ ವಾತಾವರಣ ಪರಿಗಣಿಸಿ ಅತ್ಯಾಕರ್ಷಕ ‘ಟೂರಿಸಂ ಪಾಲಿಸಿ’ ರೂಪಿಸಲಾಗಿದೆ. ಇನ್ಫ್ರಾಸ್ಟ್ರಕ್ಚರ್ ಪ್ರಾಜೆಕ್ಟ್ ಮಾದರಿಯಲ್ಲಿ ಗ್ರೀನ್ಫೀಲ್ಡ್ ಪ್ರಾಜೆಕ್ಟ್ಗಳು ಹಾಗೂ ಹೂಡಿಕೆದಾರರಿಗೆ ದೀರ್ಘಾವಧಿಯ ಸಾಲ ಮರುಪಾವತಿ ವಿನಾಯಿತಿ ನೀಡಲಾಗುವುದು.
ಮಂಗಳೂರಿನಲ್ಲಿ ಸಮುದ್ರ ವಿಜ್ಞಾನ ಹಾಗೂ ನೀಲಿ ಆರ್ಥಿಕತೆಗೆ (Blue Economy) ಒತ್ತು ನೀಡಲು ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ. ಪ್ರಸ್ತುತ ಇರುವ 60 ಸೀಟುಗಳನ್ನು 200 ಸೀಟುಗಳಿಗೆ ಹೆಚ್ಚಿಸಲು ನಿರ್ಧಾರ.
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಮೊದಲ ಪ್ರಶ್ನೆ ಹಾಗೂ ಜನರ ಆಶಯದಂತೆ ಪುತ್ತೂರಿನಲ್ಲಿ ₹450 ಕೋಟಿ ವೆಚ್ಚದಲ್ಲಿ ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮಂಜೂರಾತಿ. ಮಂಗಳೂರಿನಲ್ಲಿ ಕಿದ್ವಾಯಿ ಮತ್ತು ಜಯದೇವ ಆಸ್ಪತ್ರೆಗಳ ವಿಸ್ತರಣೆಗೂ ಅನುಮೋದನೆ.
‘ಸಮಗ್ರ ಕರ್ನಾಟಕ, ಸಮೃದ್ಧ ಕರ್ನಾಟಕ’ ನಿರ್ಮಾಣಕ್ಕಾಗಿ ಮುಂದಿನ 15 ತಿಂಗಳಲ್ಲಿ ಬೆಂಗಳೂರಿನಿಂದ ಹೊರಗೆ ರಾಜ್ಯದ 10 ರಿಂದ 12 ವಿವಿಧ ಸ್ಥಳಗಳಲ್ಲಿ ಸಂಪುಟ ಸಭೆಗಳನ್ನು ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
“ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಕರಾವಳಿಯ ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿಹಿಡಿಯಲು ನಮ್ಮ ಸರ್ಕಾರ ಬದ್ಧವಾಗಿದೆ.”
— ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
