ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ಕಳೆದ ಎರಡು–ಮೂರು ವರ್ಷಗಳಿಂದ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಅತ್ಯಂತ ಕಳಪೆ ಮಟ್ಟದಲ್ಲಿದ್ದು, ಅರ್ಧಕ್ಕೇ ನಿಂತುಹೋಗಿದೆ. ಯೋಜನೆಯಡಿ ಪ್ರತಿಯೊಂದು ಮನೆಗೂ ನೀರು ತಲುಪಿಸಬೇಕಿದ್ದ ಕೆಲಸ ಅರ್ಧದಲ್ಲೇ ಸ್ಥಗಿತಗೊಂಡಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪ್ರತಿನಿತ್ಯ ಪರದಾಡುವಂತಾಗಿದೆ.
ಈ ಕುರಿತು ಆಕ್ರೋಶ ಹೊರಹಾಕಿರುವ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಚಿನ್ನುಮಿ, ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿ ಅರ್ಧದಲ್ಲೇ ಬಿಟ್ಟು ಹೋಗಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಲೋಪ ಎಸಗಿರುವ ಗುತ್ತಿಗೆದಾರರಿಂದ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವುದರ ಜೊತೆಗೆ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಬರುವ ಒಂದು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಗ್ರಾಮಸ್ಥರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಚಿನ್ನುಮಿ ಎಚ್ಚರಿಸಿದ್ದಾರೆ.
ಇದೇ ವೇಳೆ ಗ್ರಾಮದ ಶ್ರೀಮಂತ ಸ್ವಾಮಿ, ಅರ್ಜುನ್ ಹಾಗೂ ಪದ್ಮಾವತಿ ಸಂಗಮ ಮಾತನಾಡಿ, ಗ್ರಾಮದ ನೀರಿನ ಸಮಸ್ಯೆಗೆ ತಕ್ಷಣವೇ ಸೂಕ್ತ ಪರಿಹಾರ ಸಿಗದಿದ್ದರೆ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸುವುದಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
