ತಿಪಟೂರು: ತಿಪಟೂರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಫ್ರೆಶರ್ಸ್ ಫಿಯೆಸ್ತ 2026’ ಅತ್ಯಂತ ಸಡಗರದಿಂದ ಜರುಗಿತು.
ಕಾಲೇಜಿನ ಗ್ರಂಥಾಲಯದಲ್ಲಿರುವ ಸುಮಾರು 50,000 ಪುಸ್ತಕಗಳ ಜ್ಞಾನ ಸಂಪನ್ಮೂಲವನ್ನು ಮತ್ತು ಬೋಧಕ ವರ್ಗದ ಜ್ಞಾನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಪದವಿ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧತೆ ನಡೆಸುವಂತೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಎಚ್.ಸಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಬಿಎ ಕೋರ್ಸ್ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಭವಿಷ್ಯದ ಉತ್ತಮ ರೂಪಣೆಗಾಗಿ ಕಾಲೇಜಿನ ಸಂಪೂರ್ಣ ಸಂಪನ್ಮೂಲಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ರೇಣುಕಾ, ವಿದ್ಯಾರ್ಥಿಗಳು ಉದ್ಯೋಗಕ್ಕೆ ಸಿದ್ಧರಾಗುವುದರ ಜೊತೆಗೆ ಇಂಗ್ಲಿಷ್ ಕಲಿಕೆಗೆ ಸಮಾನ ಆದ್ಯತೆ ನೀಡಬೇಕು ಎಂದರು. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಆತ್ಮೀಯವಾಗಿ ಬರಮಾಡಿಕೊಂಡಿರುವುದು ಶ್ಲಾಘನೀಯ ಎಂದು ತಿಳಿಸಿದ ಅವರು, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಸದ್ಬಳಕೆ ಮಾಡಿಕೊಂಡು ತರಗತಿಗಳಲ್ಲಿ ಗಮನವಿಟ್ಟು ಕಲಿಯಬೇಕು ಹಾಗೂ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತಮ ನಾಗರಿಕರಾಗಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಡಾ. ನಾರಾಯಣ ದಾಸ್ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸರ್ವತೋಮುಖ ಬೆಳವಣಿಗೆಯೆಡೆಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಅಲ್ಲದೆ, ವಿದ್ಯಾರ್ಥಿ ಜೀವನವನ್ನು ಆನಂದಿಸುತ್ತಲೇ ತಮ್ಮ ಆಲೋಚನೆ, ಕುತೂಹಲ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸ್ವಾಗತ ಸಮಾರಂಭದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರಾದ ಲೋಹಿತ್ ರಾಮ್ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
