ಬೀದರ್: ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗಡಿ ಜಿಲ್ಲೆ ಬೀದರ್ ನ ಎಲ್ಲ ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಕಲಬುರಗಿ ನಗರದಲ್ಲಿ ನಡೆದ ಈ ಭೇಟಿಯ ವೇಳೆ, ಜಿಲ್ಲೆಯ ರೈತರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ನಿಯೋಗದ ಮುಖಂಡರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದ್ದು, ಬಿತ್ತನೆ ಮಾಡಿದ್ದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಹಾಗೂ ಮಳೆಯಿಲ್ಲದೆ ಬೆಳೆಗಳು ಕಣ್ಣೆದುರೇ ಒಣಗಿ ಹೋಗುತ್ತಿವೆ ಎಂದು ವಿವರಿಸಿದರು. ಅಲ್ಲದೆ, ಕೃಷಿಗಾಗಿ ಸಾಲಸೋಲ ಮಾಡಿದ್ದ ರೈತರು ಬೆಳೆ ನಷ್ಟದಿಂದಾಗಿ ಆರ್ಥಿಕವಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಉಳಿದ ಎಲ್ಲ ತಾಲೂಕುಗಳನ್ನು ಕೂಡಲೇ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು ಹಾಗೂ ಸಂಕಷ್ಟದಲ್ಲಿರುವ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಸರಕಾರವನ್ನು ಒತ್ತಾಯಿಸಿದರು.
ಈ ನಿಯೋಗದಲ್ಲಿ ರೈತ ಸಂಘದ ಅಧ್ಯಕ್ಷ ನಾಗೇಂದ್ರ, ಗೌರವಾಧ್ಯಕ್ಷ ಚಾಮರಾಜ ಪಾಟೀಲ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿರಾದಾರ, ಸಂಘಟನಾ ಕಾರ್ಯದರ್ಶಿ ಅಶೋಕ ಕಾರಬಾರಿ, ಪಂಡಿತ ಚಿದ್ರಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
