ಬೀದರ್ / ಔರಾದ್: ಬೀದರ್ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗಿತ್ತೆ ಮಾಧವ ವಿಠ್ಠಲರಾವ್ ಅವರು ಸೋಮವಾರ ಔರಾದ್ ತಾಲೂಕಿನ ವಿವಿಧ ಭಾಗಗಳಿಗೆ ದಿಢೀರ್ ಭೇಟಿ ನೀಡಿ, ನಡೆಯುತ್ತಿರುವ ಹಲವು ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಂಸ್ಥೆಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು.
ತಾಲೂಕಿನ ಬಾದಲಗಾಂವ ಗ್ರಾಮಕ್ಕೆ ಭೇಟಿ ನೀಡಿದ ಸಿಇಒ, ಜಲ ಜೀವನ್ ಮಿಷನ್ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಪ್ರಗತಿ ಹಾಗೂ ಅನುಷ್ಠಾನವನ್ನು ನೇರವಾಗಿ ವೀಕ್ಷಿಸಿದರು. ಯೋಜನೆಯ ಪ್ರಸ್ತುತ ಸ್ಥಿತಿಗತಿ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ವನಮಾರಪಳ್ಳಿ ಗ್ರಾಮದ ಕಿತ್ತೂರರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯರಿಗೆ ಕಲ್ಪಿಸಲಾಗಿರುವ ವಸತಿ, ಸ್ವಚ್ಛತೆ, ಕುಡಿಯುವ ನೀರು ಹಾಗೂ ಆಹಾರದ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಈ ವೇಳೆ ವಿದ್ಯಾರ್ಥಿನಿಯರೊಂದಿಗೆ ನೇರವಾಗಿ ಸಂವಾದ ನಡೆಸಿ, ಅವರ ಸಮಸ್ಯೆಗಳು ಹಾಗೂ ಅಗತ್ಯತೆಗಳನ್ನು ಆಲಿಸಿದ ಅವರು, ಶಾಲೆಯಲ್ಲಿ ಸೂಕ್ತ ಮೂಲಸೌಕರ್ಯ ಕಲ್ಪಿಸುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆ ಪರಿಶೀಲನೆ:
ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ನೈರ್ಮಲ್ಯ, ಮೂಲಸೌಕರ್ಯ ಮತ್ತು ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಯ ವಿವಿಧ ವಿಭಾಗಗಳ ಸಿಬ್ಬಂದಿಯಿಂದ ಕಾರ್ಯನಿರ್ವಹಣೆಯ ಮಾಹಿತಿ ಪಡೆದ ಅವರು, ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ದೊರೆಯುವಂತೆ ನಿರಂತರ ಮೇಲ್ವಿಚಾರಣೆ ನಡೆಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿಗಳಿಗೆ (THO) ನಿರ್ದೇಶನ ನೀಡಿದರು.
ಈ ದಿಢೀರ್ ಪರಿಶೀಲನೆ ವೇಳೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಸಹಾಯಕ ನಿರ್ದೇಶಕ (ಗ್ರಾ.ಉ) ಶಿವಕುಮಾರ ಘಾಟೆ, ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಂತ್ರಿಕ ಸಹಾಯಕರಾದ ಶರಣಪ್ಪ, ಸಂದೀಪ ಕಳ್ಸೆ, ಪರಮೇಶ್ವರ್, ಐಇಸಿ ಸಂಯೋಜಕ ಅಂಬಾದಾಸ ಪಾಟೀಲ್ ಹಾಗೂ ವಿವಿಧ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
