ಬೀದರ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಲೋಕಾಯುಕ್ತ ಪೊಲೀಸರು ನಿನ್ನೆ ಬೆಳಿಗ್ಗೆಯಿಂದಲೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ತೀವ್ರವಾಗಿ ಪರಿಶೀಲಿಸಿದ್ದಾರೆ.
ಕೆಲ ದಿನಗಳಷ್ಟೇ ಸರ್ಕಾರಿ ಸೇವೆಯಿಂದ ನಿವೃತ್ತರಾಗಿರುವ ಮಾಣಿಕರಾವ್ ಶೇರಿಕಾರ್ ವಿರುದ್ಧದ ದೂರುಗಳ ಆಧಾರದ ಮೇಲೆ, ಲೋಕಾಯುಕ್ತ ಕಲಬುರಗಿ ವಿಭಾಗದ ಎಸ್.ಪಿ.ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಬೀದರ್ ಡಿವೈಎಸ್ ಪಿ ಹನುಮಂತರಾಯ ನೇತೃತ್ವದ ವಿಶೇಷ ಪೊಲೀಸ್ ತಂಡವು ಈ ದಾಳಿಯ ನೇತೃತ್ವ ವಹಿಸಿದೆ.
ಲೋಕಾಯುಕ್ತ ಅಧಿಕಾರಿಗಳ ತಂಡವು ಬೀದರ್ ನಗರದ ಹಕ್ ಕಾಲೋರಿಯಲ್ಲಿರುವ ನಿವಾಸ, ಹುಮನಾಬಾದ್ನ ಟೀಚರ್ಸ್ ಕಾಲೋನಿಯಲ್ಲಿರುವ ಮನೆ ಹಾಗೂ ಚಿಟಗುಪ್ಪ ತಾಲ್ಲೂಕಿನ ಮುತ್ತಂಗಿ ಗ್ರಾಮದಲ್ಲಿರುವ ಫಾರ್ಮ್ ಹೌಸ್ಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದೆ. ಸದ್ಯ ಈ ಎಲ್ಲಾ ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರಿದಿದ್ದು, ಆಸ್ತಿ–ಪಾಸ್ತಿ ಹಾಗೂ ಬ್ಯಾಂಕ್ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
