ಕೊರಟಗೆರೆ: ರಾಷ್ಟ್ರಪಿತ ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ತಾಲೂಕು ಆಡಳಿತದ ವತಿಯಿಂದ ಸ್ವಚ್ಛತಾ ಅಭಿಯಾನ ಹಾಗೂ ಶ್ರಮದಾನವನ್ನು ಅತ್ಯಂತ ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು. ತಹಶೀಲ್ದಾರ್ ಮಂಜುನಾಥ್ ಅವರು ಈ ಸ್ವಚ್ಛತಾ ಆಂದೋಲನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಪತ್ರಕರ್ತರು, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಒಟ್ಟಾಗಿ ಸೇರಿ ಈ ಶ್ರಮದಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ದೇವಾಲಯದ ಆವರಣ, ಅನ್ನದಾಸೋಹ ಮಂಟಪ, ಬೆಟ್ಟದ ಸುತ್ತಮುತ್ತಲಿನ ಪ್ರದೇಶ ಹಾಗೂ ಮೆಟ್ಟಿಲುಗಳ ಅಕ್ಕಪಕ್ಕ ಬಿದ್ದಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಕಸ-ಕಡ್ಡಿ ಮತ್ತು ಗಿಡ–ಗಂಟೆಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವ ಮೂಲಕ ಸ್ಥಳವನ್ನು ಸ್ವಚ್ಛಗೊಳಿಸಲಾಯಿತು.
ಈ ವೇಳೆ ಮಾತನಾಡಿದ ತಹಶೀಲ್ದಾರ್ ಮಂಜುನಾಥ್ ಅವರು, ಕ್ಷೇತ್ರಕ್ಕೆ ಪ್ರತಿನಿತ್ಯ ಬರುವ ಭಕ್ತಾದಿಗಳು ಮತ್ತು ಪ್ರವಾಸಿಗರು ಅರಿವಿಲ್ಲದೆ ಪ್ಲಾಸ್ಟಿಕ್ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಕುತ್ತಿರುವುದರಿಂದ ಪುಣ್ಯಸ್ಥಳದ ಪಾವಿತ್ರ್ಯತೆ ಹಾಳಾಗುತ್ತಿದೆ, ಪ್ಲಾಸ್ಟಿಕ್ ಬಳಕೆಯಿಂದ ಮೂಕ ಪ್ರಾಣಿ ಹಾಗೂ ಪಕ್ಷಿ ಸಂಕುಲಕ್ಕೂ ತೀವ್ರ ಹಾನಿಯಾಗುತ್ತಿರುವುದರಿಂದ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಈ ಶ್ರಮದಾನ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಸಿದ್ದರಬೆಟ್ಟವನ್ನು ಕಠಿಣವಾಗಿ “ಪ್ಲಾಸ್ಟಿಕ್ ನಿರ್ಬಂಧಿತ ಪ್ರದೇಶ”ವೆಂದು ಘೋಷಿಸಲಾಗಿದೆ ಎಂದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
