ತುಮಕೂರು: ಜಿಲ್ಲೆಯಲ್ಲಿ ನಡೆದ ಹಳೆ ದ್ವೇಷದ ಪ್ರಕರಣವೊಂದರಲ್ಲಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ನ್ಯಾಯಾಧೀಶರಾದ ಮೊಹಮ್ಮದ್ ಅಶ್ರಫ್ ಆರೀಫ್ ಅವರು ಈ ತೀರ್ಪು ಪ್ರಕಟಿಸಿದ್ದು, ಕುಣಿಗಲ್ ತಾಲೂಕಿನ ಕಲ್ಲುಪಾಳ್ಯದ ಸುರೇಶ್, ಶಶಿಕುಮಾರ್ ಹಾಗೂ ಮೋಹನ್ ಶಿಕ್ಷೆಗೆ ಒಳಗಾದ ಅಪರಾಧಿಗಳಾಗಿದ್ದಾರೆ.
2015ರ ಮಾರ್ಚ್ 3ರಂದು ಕುಣಿಗಲ್ ತಾಲೂಕಿನ ಕಲ್ಲುಪಾಳ್ಯದ ವಾಸಿ ರಮೇಶ್ ಎಂಬ ಯುವಕನು ತೋಟದ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಹಳೆ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಸುರೇಶ್, ಶಶಿಕುಮಾರ್ ಮತ್ತು ಮೋಹನ್ ಏಕಾಏಕಿ ರಮೇಶ್ ಮೇಲೆ ಮಾರಕ ಅಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಬಿಯರ್ ಬಾಟಲಿ ಹಾಗೂ ಕಬ್ಬಿಣದ ರಾಡ್ ಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದರ ಪರಿಣಾಮ, ರಮೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದರು.
ಈ ಘಟನೆಗೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಪ್ರಕರಣದ ತನಿಖೆ ಕೈಗೊಂಡಿದ್ದ ಸಿಪಿಐ ಧಮೇಂದ್ರ ಹೆಚ್.ಎಂ. ಅವರು ಕೂಲಂಕಷವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಎಲ್ಲಾ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮೇಲ್ಕಂಡ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
