ಚಿತ್ರದುರ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಬಿಜೆಪಿಯ ‘ಸೇವಾ ಸಂಕಲ್ಪ ಅಭಿಯಾನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಹುಲ್ ಗಾಂಧಿಗೆ ‘ರಾಹು ಕಾಲ’ ಬಂದಿರುವುದರಿಂದ ಅವರು ಪ್ರತಿಭಟನೆ ಮಾಡುತ್ತಿದ್ದು, ಆ ಪ್ರತಿಭಟನೆಗೆ ಯಾವುದೇ ಅರ್ಥವಿಲ್ಲ ಎಂದು ವ್ಯಂಗ್ಯವಾಡಿದರು.
ಸಾಂವಿಧಾನಿಕ ಸಂಸ್ಥೆಗಳ ವಿರುದ್ಧ ರಾಹುಲ್ ಗಾಂಧಿ ನಡೆದುಕೊಳ್ಳುತ್ತಿದ್ದಾರೆ ಎಂದ ಅವರು, ಚುನಾವಣಾ ಆಯೋಗದ ಮುಖ್ಯಸ್ಥರನ್ನು ತೆಗೆದುಹಾಕಲು ನಿರ್ದಿಷ್ಟ ನಿಯಮಗಳಿವೆ. ಚುನಾವಣಾ ಆಯೋಗವು ನೆಹರು ಮತ್ತು ಇಂದಿರಾಗಾಂಧಿ ಅವರ ಕಾಲದಲ್ಲೇ ರಚನೆಯಾದ ಸ್ವತಂತ್ರ ಸಂಸ್ಥೆಯಾಗಿದೆ. ಆದರೆ ರಾಹುಲ್ ಗಾಂಧಿ ಸಾಂವಿಧಾನಿಕ ಸಂಸ್ಥೆಗಳಿಗೆ ನಿರಂತರವಾಗಿ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಚುನಾವಣೆ ಸರಿಯಿತ್ತಾ? ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಹೋಗಲಿ ಎಂದು ಸವಾಲು ಹಾಕಿದರು. ಕಾಂಗ್ರೆಸ್ ಗೆದ್ದ ಕಡೆ ಚುನಾವಣೆ ಆಯೋಗ ಒಳ್ಳೆಯದು, ಸೋತ ಕಡೆ ಆಯೋಗ ಸರಿಯಿಲ್ಲ ಎನ್ನುವುದು ರಾಹುಲ್ ಗಾಂಧಿಯ ದ್ವಂದ್ವ ನೀತಿಯಾಗಿದೆ ಎಂದರು.
ಇಡಿ, ಸಿಬಿಐ ಮತ್ತು ಚುನಾವಣಾ ಆಯೋಗವನ್ನು ಬಿಜೆಪಿ ಏಜೆಂಟ್ ಗಳು ಎನ್ನುವ ರಾಹುಲ್ ಗಾಂಧಿ, ವಿಪಕ್ಷ ನಾಯಕನಾಗಲು ಯೋಗ್ಯರಲ್ಲ ಎಂದು ಕಿಡಿಕಾರಿದರು. ಕೆಪಿಎಸ್‌ಸಿ ಕುರಿತು ಹೈಕೋರ್ಟ್ ತೀರ್ಪು ಹಾಗೂ ತ್ರಿವಳಿ ತಲಾಖ್ ಕುರಿತ ಸುಪ್ರೀಂ ಕೋರ್ಟ್ ತೀರ್ಪನ್ನೂ ಸಹ ಅವರು ಪ್ರಶ್ನಿಸಿದ್ದಾರೆ ಎಂದು ಟೀಕಿಸಿದರು.
ರಾಜ್ಯ ಹಾಗೂ ದೇಶದ ಜನತೆ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಕಥೆ ಮುಗಿಯಲಿದೆ ಎಂದು ಆರ್. ಅಶೋಕ್ ಲೇವಡಿ ಮಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
