ಬೆಂಗಳೂರು/ನವದೆಹಲಿ: ಮುಖ್ಯಮಂತ್ರಿಯಾದ ಬಳಿಕ ತನ್ನ ಹಾಗೂ ಇತ್ತೀಚೆಗೆ ಇಲಾಖೆಯ ಸಚಿವರ ವಿರುದ್ಧ ‘ಸ್ಟಿಂಗ್ ಆಪರೇಷನ್’ (ಮಾರುವೇಷದ ಕಾರ್ಯಾಚರಣೆ) ನಡೆಸಲು ಗಂಭೀರ ಯತ್ನಗಳು ನಡೆದಿವೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಫೋಟಕ ಆರೋಪ ಮಾಡಿದ್ದಾರೆ.
ನವದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕೃತ್ಯದ ಹಿಂದೆ ಇರುವ ‘ಪಿತಾಮಹ’ ಯಾರು ಎಂಬುದು ತಮಗೆ ಸಂಪೂರ್ಣವಾಗಿ ತಿಳಿದಿದೆ ಎಂದಿದ್ದಾರೆ.
ತಮ್ಮ ಮೇಲಿಂದಲೇ ಈ ‘ಸ್ಟಿಂಗ್ ಆಪರೇಷನ್’ ಕಾರ್ಯಾಚರಣೆಗಳನ್ನು ಆರಂಭಿಸಲು ಪ್ರಯತ್ನಿಸಲಾಗಿದೆ ಎಂದು ತಿಳಿಸಿರುವ ಡಿ.ಕೆ.ಶಿವಕುಮಾರ್, ಇದಕ್ಕೆ ಹಣಕಾಸಿನ ನೆರವು ನೀಡುತ್ತಿರುವವರು ಯಾರು ಮತ್ತು ಈ ಕೃತ್ಯಕ್ಕಾಗಿ ಖಾಸಗಿ ಏಜೆಂಟರನ್ನು ನೇಮಕ ಮಾಡಿಕೊಂಡಿರುವವರ ಬಗ್ಗೆಯೂ ತಮಗೆ ಪಕ್ಕಾ ಮಾಹಿತಿ ಹಾಗೂ ಸಾಕ್ಷ್ಯಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲವರು ಅಧಿಕಾರಿಗಳನ್ನು ಸುಮ್ಮನೆ ಸಿಕ್ಕಿಹಾಕಿಸಲು ಸಂಚು ರೂಪಿಸುತ್ತಿದ್ದಾರೆ. ಹೀಗಾಗಿ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಮತ್ತು ಎಚ್ಚರಿಕೆಯಿಂದ ಇರಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ತಮಗೆ ಬಂದ ಕೆಲವು ವ್ಯಕ್ತಿಗಳ ಮೇಲೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿ ದಾಖಲೆಗಳನ್ನು ಸಿದ್ಧಪಡಿಸಿಟ್ಟುಕೊಂಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ನಾಯಕರು ಬಡ ಹಾಗೂ ಅಲ್ಪಸಂಖ್ಯಾತ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಪೂರ್ವ ಮುದ್ರಿತ ‘ಫಾರಂ 7’ ಅರ್ಜಿಗಳನ್ನು ಲಕ್ಷಾಂತರ ಸಂಖ್ಯೆಯಲ್ಲಿ ಸಲ್ಲಿಸುವ ಮೂಲಕ ದೊಡ್ಡ ಮಟ್ಟದ ಮತಗಳ್ಳತನ ಹಾಗೂ ಕ್ರಿಮಿನಲ್ ಸಂಚು ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಸರ್ಕಾರದ ಹೋರಾಟದ ನಂತರವೇ ಚುನಾವಣಾ ಆಯೋಗವು ಸೂಕ್ತ ಪರಿಶೀಲನೆ ಇಲ್ಲದೆ ಯಾವುದೇ ಅರ್ಹ ಮತವನ್ನು ತೆಗೆದುಹಾಕಬಾರದು ಎಂದು ಸ್ಪಷ್ಟ ಸೂಚನೆ ನೀಡಿರುವುದಾಗಿ ಅವರು ತಿಳಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಾಗೂ ದಬ್ಬಾಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಇದು ದೇಶದ ಪ್ರಜಾಪ್ರಭುತ್ವದ ಕರಾಳ ದಿನ ಎಂದು ಬಣ್ಣಿಸಿದ್ದಾರೆ. ದೇಶದ ಜನಪ್ರತಿನಿಧಿಗಳು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಈ ಹೋರಾಟ ಅನಿವಾರ್ಯವಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
