ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರ ಮತ್ತೊಂದು ಕಾನೂನು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಶ್ ಮಾಫಿ ಸಾಕ್ಷಿ (ಅಪ್ರೂವರ್) ಆಗಿ ನೀಡುತ್ತಿರುವ ಹೇಳಿಕೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರದೋಶ್ ಅವರನ್ನು ಅಪ್ರೂವರ್ ಆಗಿ ಸ್ವೀಕರಿಸಿರುವ ಕೆಳ ನ್ಯಾಯಾಲಯ ಹಾಗೂ ಹೈಕೋರ್ಟ್ ಆದೇಶಗಳಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ದರ್ಶನ್ ಪರ ವಕೀಲರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರದೋಶ್ ಅವರನ್ನು ಮಾಫಿ ಸಾಕ್ಷಿಯಾಗಿ ಸ್ವೀಕರಿಸುವ ಪ್ರಕ್ರಿಯೆಯನ್ನು ಮ್ಯಾಜಿಸ್ಟ್ರೇಟ್ ಹಾಗೂ ವಿಚಾರಣಾ ನ್ಯಾಯಾಲಯಗಳು ಕಾನೂನು ಪ್ರಕ್ರಿಯೆಯಂತೆ ನಡೆಸಿವೆ. ಈ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಯಾವುದೇ ಕಾನೂನು ಅಥವಾ ತಾಂತ್ರಿಕ ಲೋಪ ಕಂಡುಬಂದಿಲ್ಲ ಎಂಬ ಕಾರಣಕ್ಕೆ ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ ಎಂದು ವಕೀಲರು ವಿವರಿಸಿದ್ದಾರೆ. ಪ್ರದೋಶ್ ಅಪ್ರೂವರ್ ಆಗಿ ನೀಡುವ ಹೇಳಿಕೆ ಎಷ್ಟು ಸತ್ಯ ಎಂಬುದನ್ನು ವಿಚಾರಣೆಯ ಸಂದರ್ಭದಲ್ಲಿ ಪರಿಶೀಲಿಸಲು ಅವಕಾಶವಿದೆ. ವಿಚಾರಣಾ ನ್ಯಾಯಾಲಯದಲ್ಲಿ ಪ್ರದೋಶ್ ಅವರನ್ನು ದರ್ಶನ್ ಪರ ವಕೀಲರು ಕ್ರಾಸ್ ಎಕ್ಸಾಮಿನೇಷನ್ ಮಾಡಬಹುದು.
ಪ್ರದೋಶ್ ಅವರ ಹೇಳಿಕೆಯನ್ನು ವಿಚಾರಣೆಗೂ ಮುನ್ನವೇ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ. ಅವರ ಹೇಳಿಕೆಯ ಸಾಕ್ಷ್ಯಮೌಲ್ಯವನ್ನು ವಿಚಾರಣಾ ನ್ಯಾಯಾಲಯವೇ ಮುಂದಿನ ಹಂತದಲ್ಲಿ ಪರಿಶೀಲಿಸಲಿದೆ ಎಂದು ವಕೀಲರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಪ್ರದೋಶ್ ಅಪ್ರೂವರ್ ಆಗಿರುವ ಹಿನ್ನೆಲೆಯಲ್ಲಿ ಅವರು ನೀಡುವ ಹೇಳಿಕೆಗಳು ಮುಂದಿನ ವಿಚಾರಣೆಯಲ್ಲಿ ಪ್ರಮುಖವಾಗುವ ಸಾಧ್ಯತೆಯಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ತಿಳಿದಿರುವ ವಿಚಾರಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸುವುದಾಗಿ ಪ್ರದೋಶ್ ಈಗಾಗಲೇ ತಿಳಿಸಿದ್ದಾರೆ.ಅವರ ಹೇಳಿಕೆಗಳ ಸತ್ಯಾಸತ್ಯತೆ ಮತ್ತು ಸಾಕ್ಷ್ಯಮೌಲ್ಯವನ್ನು ಅಂತಿಮವಾಗಿ ವಿಚಾರಣಾ ನ್ಯಾಯಾಲಯವೇ ನಿರ್ಧರಿಸಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
