ತುಮಕೂರು: ದಿನಾಂಕ: 08—10–2026ರಂದು ತುಮಕೂರು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET)-2026 ಅನ್ನು ಅಕ್ಟೋಬರ್ 11ರಂದು ತುಮಕೂರು ನಗರದ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸಿದ್ಧತೆ, ಪರೀಕ್ಷಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಗಳ ಸಿದ್ಧತೆ ಹಾಗೂ ಪರೀಕ್ಷಾ ಸಾಮಗ್ರಿಗಳ ಸುರಕ್ಷಿತ ನಿರ್ವಹಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು. ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರೊಂದಿಗೆ ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಪಾರದರ್ಶಕತೆಯನ್ನು ಕಾಪಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಪರೀಕ್ಷಾ ದಿನದಂದು ಕೇಂದ್ರಗಳ ಸುತ್ತಮುತ್ತ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅನುಕೂಲವಾಗುವಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ, ಯಾವುದೇ ಲೋಪದೋಷಗಳಿಗೆ ಅವಕಾಶವಾಗದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕು. ಸಂಬಂಧಿಸಿದ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಪರೀಕ್ಷಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಸಭೆಯಲ್ಲಿ ಪರೀಕ್ಷಾ ಕಾರ್ಯಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ ಸಂಬಂಧಿಸಿದ ಸಿಬ್ಬಂದಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
